ಸ್ನಾತಕೋತ್ತರ ಕೋರ್ಸ್‌ಗಳ ಪರೀಕ್ಷಾ ಕೇಂದ್ರಗಳನ್ನು ಕಡಿತ ವಿಚಾರ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2019-01-10 16:05 GMT

ಬೆಂಗಳೂರು, ಜ.10: ಸ್ನಾತಕೋತ್ತರ ಕೋರ್ಸ್‌ಗಳ ಪರೀಕ್ಷಾ ಕೇಂದ್ರಗಳನ್ನು ಕಡಿತಗೊಳಿಸಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕಾನೂನಿನಲ್ಲಿ ಇಂತಿಷ್ಟೇ ಪರೀಕ್ಷಾ ಕೇಂದ್ರಗಳು ಇರಬೇಕೆಂದಿಲ್ಲ ಎಂದು ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಬೇಕೆಂದು ಕೋರಿ ಕಿಶೋರ್‌ಕುಮಾರ್ ಸೇರಿ 6 ಜನರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಗುಲಬರ್ಗಾ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಲ್ಲಿ ಈಗಾಗಲೇ 16 ಸ್ನಾತಕೋತ್ತರ ಕೋರ್ಸ್‌ಗಳ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲದೆ, ಮತ್ತಷ್ಟು ಪರೀಕ್ಷಾ ಕೇಂದ್ರಗಳನ್ನು ತೆರೆಯುವ ಬಗ್ಗೆ ಯಾವುದೇ ಕಾನೂನಿನಲ್ಲೂ ಇಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿತು.

ಅರ್ಜಿದಾರರ ಪರ ವಾದಿಸಿದ ವಕೀಲ ಎ.ನಾಗರಾಜಪ್ಪ ಅವರು, ಈ ಮೊದಲು ಗುಲಬರ್ಗಾ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ 40ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಿದ್ದವು. ಆದರೆ, ಈಗ ಕ್ಲಸ್ಟರ್ ಪದ್ಧತಿಯನ್ನು ಜಾರಿಗೆ ತಂದಿರುವ ಗುಲಬರ್ಗಾ ವಿಶ್ವವಿದ್ಯಾಲಯವು ಬರೀ 16 ಪರೀಕ್ಷಾ ಕೇಂದ್ರಗಳನ್ನು ತೆರೆದು ಕಲಂ 371(ಜೆ) ಜಾರಿಯಲ್ಲಿರುವ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನ್ಯಾಯ ಎಸಗಿದೆ ಎಂದು ಪೀಠಕ್ಕೆ ತಿಳಿಸಿದರು.

ಸ್ನಾತಕೋತ್ತರ ಓದುತ್ತಿರುವ ವಿದ್ಯಾರ್ಥಿಗಳು ಗುಲಬರ್ಗಾ ವಿವಿ ತೆರೆದಿರುವ ಪರೀಕ್ಷಾ ಕೇಂದ್ರಗಳಿಗೆ ಹೋಗಿಯೇ ಪರೀಕ್ಷೆ ಬರೆಯಬೇಕೆಂದು ಆದೇಶ ಹೊರಡಿಸಿದ್ದಾರೆ. ಆದರೆ, ಹಿಂದುಳಿದ ಪ್ರದೇಶದ ವಿದ್ಯಾರ್ಥಿಗಳು ಆರ್ಥಿಕವಾಗಿ ಅಷ್ಟೇನು ಸಬಲರಲ್ಲ ಎಂದು ಪೀಠಕ್ಕೆ ತಿಳಿಸಿದರು.

 ವಕೀಲರ ವಾದ ಆಲಿಸಿದ ನ್ಯಾಯಪೀಠವು ಈ ಮೊದಲು 6 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಜ.7ರ ನಂತರ ಮತ್ತೆ 10 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿಯನ್ನು ವಜಾಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News