ನರ್ಸರಿ ಶಾಲೆಯಲ್ಲಿ ಪ್ರತಿಭಟನೆ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಅರವಿಂದ ಲಿಂಬಾವಳಿ

Update: 2019-01-10 16:44 GMT

ಬೆಂಗಳೂರು, ಜ.10: ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಬೀಸನಹಳ್ಳಿಯ ಖಾಸಗಿ ನರ್ಸರಿ ಶಾಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು ಮತ್ತು ಅಧೀನ ನ್ಯಾಯಾಲಯದ ವಿಚಾರಣೆ ತಡೆ ನೀಡಬೇಕು ಎಂದು ಕೋರಿ ಶಾಸಕ ಅರವಿಂದ ಲಿಂಬಾವಳಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 2017 ಫೆ.18ರಂದು ಘಟನೆ ನಡೆದಿತ್ತು. ಇದನ್ನು ಖಂಡಿಸಿ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ರಸ್ತೆ ತಡೆ ನಡೆಸಿ ಸಂಚಾರ ದಟ್ಟಣೆ ಉಂಟು ಮಾಡಿ ಸಾರ್ವಜನಿಕ ಜನಜೀವನಕ್ಕೆ ತೊಂದರೆ ನೀಡಲಾಗಿದೆ ಎಂದು ಆರೋಪಿಸಿ ಎಚ್‌ಎಎಲ್ ಠಾಣಾ ಪೊಲೀಸರು ಅರವಿಂದ ಲಿಂಬಾವಳಿ ಸೇರಿ 24 ಮಂದಿ ವಿರುದ್ಧ ಎಫ್‌ಐರ್ ದಾಖಲಿಸಿಕೊಂಡು ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಸದ್ಯ ಪ್ರಕರಣವು ನಗರದ ಸಿಸಿಎಚ್-82 ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ತಮ್ಮ ವಿರುದ್ಧದ ಪ್ರಕರಣ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ಸುಳ್ಳು ಹಾಗೂ ಕಾನೂನುಬಾಹಿರವಾಗಿದೆ. ಹೀಗಾಗಿ, ಎಫ್‌ಐಆರ್ ರದ್ದುಗೊಳಿಸಬೇಕು ಹಾಗೂ ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News