ವಿಧಾನಸೌಧದಲ್ಲಿ ಹಣ ಪತ್ತೆ ಪ್ರಕರಣ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ - ಕುಮಾರಸ್ವಾಮಿ

Update: 2019-01-11 13:03 GMT

ಬೆಂಗಳೂರು, ಜ. 10: ‘ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿ ಸಿಬ್ಬಂದಿಯೊಬ್ಬರ ಬಳಿ ಹಣ ಪತ್ತೆ ಪ್ರಕರಣ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಲಾಲ್‌ಬಹದ್ದೂರ್ ಶಾಸ್ತ್ರಿಯವರ 53ನೆ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾನೂನಿನ ಅನ್ವಯ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಕಾಲಾವಕಾಶದ ಅಗತ್ಯವಿದೆ ಎಂದರು.

ವಿಧಾನಸೌಧದಲ್ಲಿ ಹಣ ಪತ್ತೆ ಪ್ರಕರಣ ಸಂಬಂಧ ಎಸಿಬಿ ತನಿಖೆ ಪ್ರಗತಿಯಲ್ಲಿದ್ದು, ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಿದ್ದು ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಪುಟ್ಟರಂಗಶೆಟ್ಟಿ ನ್ಯಾಯಾಲಯದ ಮೆಟ್ಟಿಲೇರಿಸುವುದು ಅವರ ವೈಯಕ್ತಿಕ ನಿರ್ಧಾರ ಎಂದರು.

ಬೀದಿಯಲ್ಲಿ ಮಾತನಾಡುವುದಿಲ್ಲ: ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ ಕೆಲ ತಾಂತ್ರಿಕ ತೊಂದರೆಗಳಿವೆ. ಹೀಗಾಗಿ ನಾನು ಬೀದಿಯಲ್ಲಿ ನಿಂತು ಮಾತನಾಡುವುದಿಲ್ಲ. ಹಾಗೇ ಮಾಡಿ ಮುಖ್ಯಮಂತ್ರಿ ಹುದ್ದೆ ಘನತೆ ಕುಗ್ಗಿಸಲು ಇಚ್ಛಿಸುವುದಿಲ್ಲ. ಎಲ್ಲಿ, ಯಾವ ನಿರ್ಧಾರ ತೆಗೆದುಕೊಳ್ಳಬೇಕೋ ಆ ನಿರ್ಧಾರವನ್ನ್ನು ತೆಗೆದುಕೊಳ್ಳುತ್ತೇನೆ ಎಂದು ನುಡಿದರು.

ಸೂಕ್ತ ಕ್ರಮ: ಶಿವಮೊಗ್ಗ ಜಿಲ್ಲೆ ವಿವಿಧೆಡೆ ಕಾಣಿಸಿಕೊಂಡಿರುವ ಮಂಗನಕಾಯಿಲೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಕಾಯಿಲೆ ಹರಡದಂತೆ ಸೂಕ್ತ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಕೆಲವು ಅಭಿಮಾನಿಗಳು ಒತ್ತಡ ಹೇರುತ್ತಿರುವುದು ನಿಜ. ಆದರೆ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದ ವರಿಷ್ಟರು ಈ ಸಂಬಂಧ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News