ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ

Update: 2019-01-11 15:01 GMT

ಬೆಂಗಳೂರು, ಜ.11: ಬಿಜೆಪಿಯವರು ಎಷ್ಟೇ ಪ್ರಯತ್ನಿಸಿದರೂ, ಅವರ ಆಪರೇಷನ್ ಕಮಲ ಯಶಸ್ವಿಯಾಗುವುದಿಲ್ಲ. ದೇಶದಲ್ಲಿ ಬಿಜೆಪಿ ದುರ್ಬಲವಾಗುತ್ತಿದೆ. ಆ ಪಕ್ಷದ ಶಾಸಕರೇ ವೈಯಕ್ತಿಕವಾಗಿ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ಖಂಡ್ರೆ ಹೇಳಿದರು.

ಶುಕ್ರವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ. ಮನಸ್ಸು ಮಾಡಿದರೇ, ಬಿಜೆಪಿ ಶಾಸಕರೇ ನಮ್ಮ ಪಕ್ಷಕ್ಕೆ ಬರುವ ಸಾಧ್ಯತೆಗಳು ಹೆಚ್ಚಿವೆ ಎಂದರು.

ಬಿಜೆಪಿಯವರು ಎಷ್ಟೇ ಪ್ರಯತ್ನಗಳನ್ನು ಮಾಡಿದರೂ, ಸಮ್ಮಿಶ್ರ ಸರಕಾರವನ್ನು ಉರುಳಿಸಿ, ಅವರ ಸರಕಾರ ರಚನೆ ಮಾಡಲು ಸಾಧ್ಯವಿಲ್ಲ. ಪದೇ ಪದೇ ಸರಕಾರದ ಅವಧಿ ಕುರಿತು ಭವಿಷ್ಯ ಹೇಳುತ್ತಲೇ ಇದ್ದಾರೆ. ಬಿಜೆಪಿಯವರ ಮನೆ ಬಾಗಿಲಿಗೆ ‘ನಾಳೆ ಬಾ’ ಎಂಬ ಫಲಕ ಅಳವಡಿಸುವುದು ಸೂಕ್ತ ಎಂದು ಈಶ್ವರ್ ಖಂಡ್ರೆ ವ್ಯಂಗ್ಯವಾಡಿದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಸಮಾಧಾನ ಸೇರಿದಂತೆ ಎಲ್ಲ ಗೊಂದಲಗಳು ಶೀಘ್ರವೇ ಬಗೆಹರಿಯಲಿವೆ. ರಮೇಶ್ ಜಾರಕಿಹೊಳಿ, ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬುದು ಕೇವಲ ಊಹಾಪೋಹ ಎಂದು ಅವರು ಹೇಳಿದರು.

ಗೆಲುವೇ ಮಾನದಂಡ: ಲೋಕಸಭಾ ಚುನಾವಣೆಯಲ್ಲಿ ಗೆಲುವೇ ಮಾನದಂಡ. ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ರಾಜ್ಯದಲ್ಲಿ ನಾವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸುತ್ತಿರುವುದರಿಂದ, ಸೀಟು ಹಂಚಿಕೆ ಕುರಿತು ಯಾವುದೇ ಸಮಸ್ಯೆಗಳು ಇಲ್ಲ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ನರೇಂದ್ರ ಮೋದಿ ಅಲೆಯ ವಿರುದ್ಧ ಹೋರಾಡಿ, ನಮ್ಮ ಪಕ್ಷದ 9 ಮಂದಿ ಸಂಸದರು ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಹಾಲಿ ಸಂಸದರು ಇರುವ ಕ್ಷೇತ್ರಗಳ ಹೊಂದಾಣಿಕೆ ಬೇಡ ಎಂದು ಸಂಸದರು ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ಅವರು ಹೇಳಿದರು.

ಜ.18ಕ್ಕೆ ಎಚ್.ಕೆ.ಪಾಟೀಲ್ ಅಧಿಕಾರ ಸ್ವೀಕಾರ

ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕವಾಗಿರುವ ಹಿರಿಯ ನಾಯಕ ಎಚ್.ಕೆ.ಪಾಟೀಲ್, ಜ.18ರಂದು ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಹಿಂದಿನ ಅಧ್ಯಕ್ಷ ಸಚಿವ ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್‌ಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಬೆಂಗಳೂರು ನಗರದ ಶಾಸಕರು, ಮುಖಂಡರ ಸಭೆ ಕರೆದು ಚರ್ಚೆ ಮಾಡಿದ್ದೇವೆ.

ಈಶ್ವರ್ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News