ತುಮಕೂರು ನಗರದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಒತ್ತು: ಸಚಿವ ಡಿ.ಸಿ.ತಮ್ಮಣ್ಣ

Update: 2019-01-12 17:38 GMT

ತುಮಕೂರು,ಜ.12: ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ 2 ಬಸ್ ನಿಲ್ದಾಣ ಹಾಗೂ ಬಸ್ ಡಿಪೋಗಳನ್ನು175 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದರು.

ನಗರದ ಬಸ್ ನಿಲ್ದಾಣ ಹಾಗೂ ಡಿಪೋ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಲ್ಕೂವರೆ ಎಕರೆ ಜಾಗದಲ್ಲಿರುವ ಬಸ್ ನಿಲ್ದಾಣವನ್ನು ಆಧುನೀಕರಣಗೊಳಿಸಿ ಅದರಲ್ಲಿ ಬಸ್ ನಿಲ್ದಾಣ ಹಾಗೂ ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಮಾಡುವುದಾಗಿ ತಿಳಿಸಿದರು. ಮೂರು ಹಂತದ ಕಟ್ಟಡದಲ್ಲಿ ಕೆಳ ಹಂತದ ಕಟ್ಟಡದಲ್ಲಿ ದುರಸ್ತಿ ವಿಭಾಗ ಹಾಗೂ ಡಿಪೋ ಇರಲಿದ್ದು, ಇನ್ನೊಂದು ಹಂತದ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ತುಮಕೂರು ನಗರವು ದಿನೇ ದಿನೇ ಬೆಳೆಯುತ್ತಿದ್ದು, ಇಲ್ಲಿ ಸೂಕ್ತವಾದ ಸಾಮಾನ್ಯ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುವುದು ಎಂದರು. ನಗರದಲ್ಲಿ ಎಲ್ಲಿಯೂ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಇಲ್ಲದಿರುವುದರ ಬಗ್ಗೆ ಬೇಸರಿಸಿದ ಅವರು, ಮಹಾನಗರ ಪಾಲಿಕೆ ವತಿಯಿಂದ ಹಣ ನೀಡಿ ಬಳಕೆ ಮಾಡುವ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರಿಂದ ಸರ್ಕಾರಕ್ಕೂ ಹೆಚ್ಚಿನ ಆದಾಯ ಬರಲಿದೆ ಎಂದು ಅವರು ತಿಳಿಸಿದರು.

ತುಮಕೂರು ನಗರವು ಬೆಳೆಯುತ್ತಿದ್ದು, ವಸಂತ ನರಸಾಪುರ ಕೈಗಾರಿಕಾ ಪ್ರದೇಶವು ಹೆಚ್ಚು ಅಭಿವೃದ್ಧಿ ಹೊಂದುತ್ತಿದೆ. 18 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗುತ್ತಿದ್ದು, 30ರಿಂದ 35 ಎಕರೆ ಜಮೀನನ್ನು ಪಡೆದು ಬಸ್ ನಿಲ್ದಾಣ, ಡಿಪೋ ಹಾಗೂ ಟರ್ಕ್ ಟ್ರಮಿನಲ್ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡುವ ಆಲೋಚನೆಯನ್ನು ತಾವು ಹೊಂದಿರುವುದಾಗಿ ತಿಳಿಸಿದ ಅವರು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಸೂಕ್ತ ಸ್ಥಳ ಪರಿಶೀಲಿಸುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಸ್ಥಳ ನಿಗದಿಪಡಿಸಿದ ನಂತರ ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ, ಭೂಸ್ವಾಧೀನ ಪ್ರಕ್ರಿಯೆಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಈ ವರ್ಷದಲ್ಲಿಯೇ ಈ ಕಾರ್ಯಕ್ಕೆ ಚಾಲನೆ ನೀಡುವುದಾಗಿ ತಿಳಿಸಿದರು.

ಖಾಸಗಿ ಬಸ್ ನಿಲ್ದಾಣದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಸಚಿವರು, ಸ್ಮಾರ್ಟ್‍ಸಿಟಿ ನಗರವಾಗುತ್ತಿರುವ ತುಮಕೂರಿನಲ್ಲಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸೂಕ್ತವಾದ ಶೌಚಾಲಯ ವ್ಯವಸ್ಥೆ, ಮಹಿಳೆಯರಿಗೆ ಪ್ರತ್ಯೇಕ ಕೊಠಡಿ ಇಲ್ಲದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಸಚಿವರೊಂದಿಗೆ ಪಾಲಿಕೆ ಆಯುಕ್ತ ಮಂಜುನಾಥ ಸ್ವಾಮಿ, ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತಿತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News