ಮಂಗನ ಕಾಯಿಲೆಯಿಂದ ಸಾವು: ಸೂಕ್ತ ಪರಿಹಾರಕ್ಕೆ ಸಿಎಂ ಜೊತೆ ಚರ್ಚೆ‍- ಸಚಿವ ಡಿ.ಸಿ.ತಮ್ಮಣ್ಣ

Update: 2019-01-13 17:03 GMT

ಶಿವಮೊಗ್ಗ, ಜ. 13: ಮಂಗನ ಕಾಯಿಲೆಯಿಂದ ಸಾವಿಗೀಡಾದ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಹೆಚ್‍.ಡಿ.ಕುಮಾರಸ್ವಾಮಿ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.

ಜಿಲ್ಲೆಯ ಸಾಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಂಗನ ಕಾಯಿಲೆ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ರೋಗ ಹರಡದಂತೆ ಲಸಿಕೆ ಹಾಕಲಾಗುತ್ತಿದೆ ಎಂದು ತಿಳಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಖರ್ಚು ವೆಚ್ಚಗಳನ್ನು ಸರ್ಕಾರದ ವತಿಯಿಂದ ಭರಿಸಲಾಗುತ್ತಿದೆ. ಮಂಗನ ಕಾಯಿಲೆ ಪೀಡಿತ ಪ್ರದೇಶಗಳಲ್ಲಿ ಡಿಎಂಪಿ ತೈಲ ಸಾಕಷ್ಟು ಪ್ರಮಾಣದಲ್ಲಿ ಇರುವಂತೆ ಕ್ರಮವಹಿಸಲಾಗಿದೆ. ಪ್ರಸ್ತುತ 8000 ಬಾಟಲ್ ಡಿಎಂಪಿ ಲಭ್ಯವಿದ್ದು ಹೆಚ್ಚುವರಿಯಾಗಿ 50 ಸಾವಿರ ಬಾಟಲ್ ತಕ್ಷಣ ತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಶಂಕಿತರ ರಕ್ತದ ಮಾದರಿ ಪರೀಕ್ಷೆಯ ವರದಿಯನ್ನು ಆದಷ್ಟು ಬೇಗನೆ ತರಿಸುವ ಕುರಿತು ಮಾತುಕತೆ ನಡೆಸಲಾಗುವುದು. ನಾಗರಿಕರು ಆತಂಕಪಡುವ ಅಗತ್ಯವಿಲ್ಲ. ರೋಗ ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದರು.

ಸಭೆ: ಮಂಗನ ಕಾಯಿಲೆ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಸಾಗರದಲ್ಲಿ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎ ದಯಾನಂದ, ಜಿಲ್ಲಾ ಕುಟುಂಬ ಕಲ್ಯಾಣ ಹಾಗೂ ಆರೋಗ್ಯಾಧಿಕಾರಿ ವೆಂಕಟೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News