ಮೈತ್ರಿ ಸರಕಾರ ಸುಭದ್ರ: ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ

Update: 2019-01-14 13:38 GMT

ಬೆಂಗಳೂರು, ಜ.14: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಸುಭದ್ರವಾಗಿರುವುದು ಮಾತ್ರವಲ್ಲದೆ, ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಸೋಮವಾರ ನಗರದಲ್ಲಿ ಬೆಂಗಳೂರು ನಗರ ಜಿಲ್ಲಾ ಪ್ರಚಾರ ಸಮಿತಿ ವತಿಯಿಂದ ಏರ್ಪಡಿಸಿದ್ದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಒಗ್ಗಟ್ಟಾಗಿ ಹೋರಾಟ ಮಾಡಿದರೆ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿದೆ ಎಂದರು.

ಕೇಂದ್ರ ಸರಕಾರದ ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಧೋರಣೆಗಳನ್ನು ಜನರ ಬಳಿ ಕೊಂಡೊಯ್ಯಬೇಕು. ಅದೇ ರೀತಿ, ನಮ್ಮ ಸರಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಕಾರ್ಯಕರ್ತರು ಹೆಚ್ಚು ಶ್ರಮ ವಹಿಸಿ ಕೆಲಸ ಮಾಡಬೇಕು. ದೇಶದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂದು ನುಡಿದರು.

ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಬೆಂಗಳೂರು ಮಹಾನಗರದಲ್ಲಿ ಮೂರು ಸ್ಥಾನಗಳನ್ನು ಗೆಲ್ಲಲು ಪಕ್ಷವನ್ನು ಬಲವಾಗಿ ಸಂಘಟಿಸಬೇಕು ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಎಚ್.ಕೆ.ಪಾಟೀಲ್ ಅವರು ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದಾರೆ. ಪಕ್ಷದ ಕಾರ್ಯಕ್ರಮಗಳ ಜತೆ ಸರಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಪ್ರಚಾರ ಮಾಡುವುದರ ಜತೆಗೆ ಜನಪರ ಪ್ರಣಾಳಿಕೆ ರೂಪಿಸಿ ಜನಮನ್ನಣೆ ಗಳಿಸಿ ಹೆಚ್ಚು ಸ್ಥಾನಗಳನ್ನು ಗಳಿಸಬೇಕೆಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News