ಬಿಜೆಪಿ ಮುಖಂಡರು ರೆಸಾರ್ಟ್‌ನಲ್ಲಿ ಹಿಡಿದಿಟ್ಟುಕೊಂಡ ಶಾಸಕರನ್ನು ಬಿಟ್ಟುಬಿಡಲಿ: ಮಲ್ಲಿಕಾರ್ಜುನ ಖರ್ಗೆ

Update: 2019-01-16 13:03 GMT

ಬೆಂಗಳೂರು, ಜ. 16: ‘ಬಿಜೆಪಿ ಕುದುರೆ ವ್ಯಾಪಾರದಲ್ಲಿ ತೊಡಗಿದ್ದು, ಇದರಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಉರುಳುತ್ತದೆ ಎಂಬ ಯಾವುದೇ ಆತಂಕವೂ ನಮಗಿಲ್ಲ’ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಬುಧವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಉಪಮುಖ್ಯಮಂತ್ರಿ ಪರಮೇಶ್ವರ್ ಜತೆ ಸಮಾಲೋಚನೆ ನಡೆಸಿದ್ದು, ಮೈತ್ರಿ ಸರಕಾರ ಸುಭದ್ರವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯವರು ಇದೇ ಮೊದಲ ಬಾರಿಗೆ ಆಪರೇಷನ್ ಕಮಲ ನಡೆಸುತ್ತಿಲ್ಲ. ಗೋವಾ, ಮಣಿಪುರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಇಂತಹ ವಿಫಲಯತ್ನ ನಡೆಸಿದೆ. ಬಿಜೆಪಿಯವರು ಭ್ರಮೆಯಲ್ಲಿದ್ದು, ಬಿಜೆಪಿ ಇದರಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ನುಡಿದರು.

ಬಿಜೆಪಿ ಮುಖಂಡರು ಸುಭದ್ರವಾಗಿರುವ ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸಿದ್ದು, ಇದನ್ನು ದೇಶದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದ ಅವರು, ಜ. 18ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಆ ಸಭೆಯಲ್ಲಿ ಮೈತ್ರಿ ಸರಕಾರ ಸುಭದ್ರ ಎಂಬುದನ್ನು ಸಾಬೀತುಪಡಿಸಲಿದ್ದೇವೆ ಎಂದು ಹೇಳಿದರು.

ಬಿಜೆಪಿ ಮುಖಂಡರು ತಮ್ಮ ಶಾಸಕರನ್ನು ಗುರು ಗ್ರಾಮದ ರೆಸಾರ್ಟ್‌ನಲ್ಲಿ ಹಿಡಿದಿಟ್ಟುಕೊಂಡಿದ್ದು, ಅವರನು ಬಿಟ್ಟುಬಿಡಿ. ರಾಜ್ಯದ ಶಾಸಕರೆಲ್ಲ ಸ್ವತಂತ್ರವಾಗಿ ಇರಲಿ. ನಿಮ್ಮ ಶಾಸಕರ ಮೇಲೇಕೆ ಸಂಶಯ ಪಡ್ತೀರಿ ಎಂದು ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News