ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಹಗಲುಗನಸು ಕಾಣುತ್ತಿದ್ದಾರೆ: ಸಚಿವ ಝಮೀರ್‌

Update: 2019-01-16 13:08 GMT

ಬೆಂಗಳೂರು, ಜ.16: ರಾಜ್ಯದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಸರಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷ ಬಿಜೆಪಿ ನಡೆಸಲು ಪ್ರಯತ್ನಿಸುತ್ತಿರುವ ಆಪರೇಷನ್ ಕಮಲ ಸಂಪೂರ್ಣ ವಿಫಲವಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಝಮೀರ್‌ ಅಹ್ಮದ್‌ ಖಾನ್ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಬಿಜೆಪಿ ಈ ಸರಕಾರವನ್ನು ಅಸ್ತಿರಗೊಳಿಸಲು ನಾನಾ ಕಸರತ್ತುಗಳನ್ನು ನಡೆಸುತ್ತಿದೆ. ಆದರೆ, ಅವರ ಯಾವ ಪ್ರಯತ್ನಗಳು ಸಫಲವಾಗುವುದಿಲ್ಲ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಹಗಲುಗನಸು ಕಾಣುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿಯಾಗಿ ಐದು ವರ್ಷ ಅಧಿಕಾರ ಪೂರೈಸಲಿದ್ದಾರೆ. ಈ ಬಗ್ಗೆ ಯಾರಿಗೂ ಅನುಮಾನವೇ ಬೇಡ ಎಂದು ಅವರು ಹೇಳಿದರು.

ಸಚಿವ ಸಂಪುಟದಿಂದ ಕೈ ಬಿಟ್ಟಿರುವುದರಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೇಸರವಾಗಿರುವುದು ಸಹಜ. ಅವರು ಪಕ್ಷ ಬಿಟ್ಟು ಎಲ್ಲೂ ಹೋಗುವುದಿಲ್ಲ. ಜಾರಕಿಹೊಳಿ, ನಾಗೇಂದ್ರ ಸೇರಿದಂತೆ ಎಲ್ಲರೂ ನಾಳೆ ಬೆಂಗಳೂರಿಗೆ ಬರುತ್ತಾರೆ ಎಂದು ಝಮೀರ್‌ ಅಹ್ಮದ್‌ ಖಾನ್ ತಿಳಿಸಿದರು.

ಬಿಜೆಪಿಯವರ ಜೊತೆ ನಮ್ಮ ಯಾವ ಶಾಸಕರೂ ಇಲ್ಲ. ಆಪರೇಷನ್ ಕಮಲ ಸಂಪೂರ್ಣವಾಗಿ ವಿಫಲವಾಗಿದೆ. ಹಗರಿಬೊಮ್ಮನಹಳ್ಳಿ ಶಾಸಕ ಭಿಯಾನಾಯ್ಕಿ ಎಲ್ಲಿಯೂ ಹೋಗಿಲ್ಲ, ನಮ್ಮ ಜೊತೆಯಲ್ಲೆ ಇದ್ದಾರೆ. ಈ ಸರಕಾರ ಅವಧಿಗೂ ಮುನ್ನ ಯಾವುದೇ ಕಾರಣಕ್ಕೂ ಪತನವಾಗುವುದಿಲ್ಲ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News