ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ವಿರುದ್ಧ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

Update: 2019-01-16 16:10 GMT

ಬೆಂಗಳೂರು, ಜ.16: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾಗೆ ವಿಐಪಿ ಸೌಲಭ್ಯ ನೀಡಲು 2 ಕೋಟಿ ಕಿಕ್‌ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶವನ್ನು ಜ.24ರವರೆಗೆ ಮುಂದುವರೆಸಲು ಎಸಿಬಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಈ ಸಂಬಂಧ ನಿವೃತ್ತ ಡಿಜಿಪಿ ಎಚ್.ಎನ್.ಸತ್ಯನಾರಾಯಣರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಸೂಚನೆ ನೀಡಿತು. 2 ಕೋಟಿ ಕಿಕ್ ಬ್ಯಾಕ್ ಪಡೆದ ಆರೋಪ ವಿಚಾರವಾಗಿ ಡಿ.ರೂಪಾ ಅವರು ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ವಿರುದ್ಧ ಎಸಿಬಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಸತ್ಯನಾರಾಯಣರಾವ್ ವಿರುದ್ಧ ಜ.24ರವರೆಗೆ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗದಂತೆ, ಪ್ರಕರಣದ ವಿಚಾರಣೆಗೆ ಮಧ್ಯಂತರ ಆದೇಶ ನೀಡಿದೆ.

ಪ್ರಕರಣವೇನು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸರಕಾರ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ವರದಿ ಆಧರಿಸಿ ತನಿಖೆ ನಡೆಸುವಂತೆ ಎಸಿಬಿಗೆ ಆದೇಶಿಸಿತ್ತು. ಪ್ರಕರಣ ದಾಖಲಿಸಿಕೊಂಡು ಎಸಿಬಿ ತನಿಖೆ ಮುಂದುವರೆಸಿತ್ತು. ಇದೀಗ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News