ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಪ್ರತಿಭಟನೆ: ಶಾಸಕ ಲಿಂಬಾವಳಿ ಪರ ವಕೀಲರಿಂದ ಅರ್ಜಿ ವಾಪಸ್

Update: 2019-01-16 16:26 GMT

ಬೆಂಗಳೂರು, ಜ.16: ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ನರ್ಸರಿ ಶಾಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು ಮತ್ತು ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಬೇಕೆಂಬ ಅರ್ಜಿಯನ್ನು ಶಾಸಕ ಅರವಿಂದ ಲಿಂಬಾವಳಿ ಪರ ವಕೀಲರು ವಾಪಸ್ ಪಡೆದ ಹಿನ್ನೆಲೆಯಲ್ಲಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

2017 ಫೆ.18ರಂದು ಘಟನೆ ನಡೆದಿತ್ತು. ಇದನ್ನು ಖಂಡಿಸಿ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ರಸ್ತೆ ತಡೆ ನಡೆಸಿ ಸಂಚಾರ ದಟ್ಟಣೆ ಉಂಟು ಮಾಡಿ ಸಾರ್ವಜನಿಕ ಜನಜೀವನಕ್ಕೆ ತೊಂದರೆ ನೀಡಲಾಗಿದೆ ಎಂದು ಆರೋಪಿಸಿ ಎಚ್‌ಎಎಲ್ ಠಾಣಾ ಪೊಲೀಸರು ಅರವಿಂದ ಲಿಂಬಾವಳಿ ಸೇರಿ 24 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಸದ್ಯ ಪ್ರಕರಣವು ನಗರದ ಸಿಸಿಎಚ್-82 ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ತಮ್ಮ ವಿರುದ್ಧದ ಪ್ರಕರಣ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ಸುಳ್ಳು ಹಾಗೂ ಕಾನೂನುಬಾಹಿರವಾಗಿದೆ. ಹೀಗಾಗಿ, ಎಫ್‌ಐಆರ್ ರದ್ದುಗೊಳಿಸಬೇಕು ಹಾಗೂ ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು. ಆದರೆ, ಹೈಕೋರ್ಟ್ ನ್ಯಾಯಪೀಠವು ಅಧೀನ ನ್ಯಾಯಾಲಯದಲ್ಲಿ ವಿಚಾರಣೆ ಇನ್ನು ಬಾಕಿ ಇದೆ. ಹೀಗಾಗಿ, ಅಲ್ಲಿಯೇ ವಿಚಾರಣೆಗೆ ತಡೆ ನೀಡಲು ಮನವಿ ಮಾಡಿಕೊಳ್ಳಿ ಎಂದು ಸೂಚನೆ ನೀಡಿತು. ಹೀಗಾಗಿ, ಅರವಿಂದ ಲಿಂಬಾವಳಿ ಪರ ವಕೀಲರು ಅರ್ಜಿಯನ್ನು ವಾಪಸ್ ಪಡೆದರು. ಅರ್ಜಿ ವಿಚಾರಣೆ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ನ್ಯಾಯಪೀಠದಲ್ಲಿ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News