ಶಾಸಕರ ಖರೀದಿಗೆ ಯತ್ನ ಆರೋಪ: ಬಿಜೆಪಿ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

Update: 2019-01-16 16:32 GMT

ಬೆಂಗಳೂರು, ಜ.16: ಹಣದ ಆಮಿಷವೊಡ್ಡಿ ಬಿಜೆಪಿ ನಾಯಕರು ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಖರೀದಿಸಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿ ನಗರದೆಲ್ಲೆಡೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬುಧವಾರ ನಗರದ ಮಲ್ಲೇಶ್ವರಂನಲ್ಲಿ ಜಮಾಯಿಸಿದ ಕಾರ್ಯಕರ್ತರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪರೇಷನ್ ಕಮಲ ಮಾಡುವ ಸಂಚು ಬಿಟ್ಟು, ವಿರೋಧ ಪಕ್ಷದಲ್ಲಿಯೇ ಕೆಲಸ ಮಾಡಲಿ ಎಂದು ಒತ್ತಾಯಿಸಿದರು. ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಶಾಸಕರನ್ನು ಕೂಡಿ ಹಾಕಿ ಅಸಹ್ಯ ಕೆಲಸ ಮಾಡುತ್ತಿದೆ. ಇದಕ್ಕೆ ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಕಾರಣರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಶಾಸಕರನ್ನು ಖರೀದಿ ಮಾಡಲು ಯತ್ನಿಸುತ್ತಿರುವ ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಹರ್ಯಾಣದ ಗುರುಗ್ರಾಮದ ಐಷಾರಾಮಿ ಹೊಟೇಲ್‌ನಲ್ಲಿ ಶಾಸಕರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದಾರೆ. ದಿನವೊಂದಕ್ಕೆ ಪ್ರತಿ ಶಾಸಕರ ಊಟ ಉಪಹಾರದ ವೆಚ್ಚವೇ 34 ಸಾವಿರ ಎಂದು ತಿಳಿದು ಬಂದಿದೆ. ಇಷ್ಟೊಂದು ಹಣ ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದು ಆರು ತಿಂಗಳಾಗಿದ್ದು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅದೇ ಕಾರಣಕ್ಕೆ ಸರಕಾರ ಕೆಡವಲು ಮುಂದಾಗಿದೆ ಎಂದು ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News