ಜ.18 ರಿಂದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ
ಬೆಂಗಳೂರು, ಜ.16: ಭಾರತ ಸೇವಾದಳ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜ.18 ಮತ್ತು 19ರಂದು ರಾಜ್ಯಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಹಮ್ಮಿಕೊಳ್ಳಲಾಗಿದೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ಸೇವಾದಳದ ಪ್ರಧಾನ ಕಾರ್ಯದರ್ಶಿ ಎಂ.ವಿ.ದೇವಿಪ್ರಸಾದ್, ಬಳ್ಳಾರಿಯ ವಿವಿ ಸಂಘದ ಕಿತ್ತೂರು ರಾಣಿ ಚೆನ್ನಮ್ಮ ಪ್ರೌಢಶಾಲೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್, ರಾಷ್ಟ್ರೀಯ ಯುವ ಯೋಜನೆ ನಿರ್ದೇಶಕ ಡಾ.ಎಸ್.ಎನ್.ಸುಬ್ಬರಾವ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದರು.
ಜ.18ರಂದು ವಿದ್ಯಾರ್ಥಿಗಳು ತಮ್ಮಲ್ಲಿರುವ ವಿವಿಧ ಕೌಶಲ್ಯಗಳ ಪ್ರದರ್ಶನ ಮಾಡಲಿದ್ದಾರೆ. ಪಥ ಸಂಚಲನ, ತುಕಡಿಗಳ ಪ್ರದರ್ಶನ, ಪಡೆ ವೀಕ್ಷಣೆ, ಸಮೂಹ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಯೋಗ, ರಾಷ್ಟ್ರಧ್ವಜವನ್ನು ಕಟ್ಟುವ ಬಗೆ, ದೇಶಭಕ್ತಿ ಗೀತೆಗಳು, ನಾಟಕಗಳು, ರಾಷ್ಟ್ರೀಯ ಭಾವೈಕ್ಯತೆ ಸಾರುವ ಪ್ರದರ್ಶನಗಳು ಮೇಳದಲ್ಲಿ ಇರಲಿವೆ ಎಂದು ತಿಳಿಸಿದರು.
ಅ.19ರಂದು ಬೆಳಗ್ಗೆ 9ಕ್ಕೆ ರಾಷ್ಟ್ರಧ್ವಜಾರೋಹಣ ಹಾಗೂ ಸ್ವಯಂಸೇವಕರಿಂದ ನಗರದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಯಲಿದೆ. ಬಳ್ಳಾರಿ ಭಾರತ ಸೇವಾದಳ ಜಿಲ್ಲಾ ಸಮಿತಿ ಅಧ್ಯಕ್ಷ ಎನ್.ಸೂರ್ಯನಾರಾಯಣ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ ಎಂದು ಹೇಳಿದರು.