ನೀತಿ ಸಂಹಿತೆ ಉಲ್ಲಂಘನೆ ಆರೋಪ: ವಿಚಾರಣೆಗೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್

Update: 2019-01-17 17:20 GMT

ಬೆಂಗಳೂರು, ಜ.17: ಕಳೆದ ವಿಧಾನಸಭೆ ಅವಧಿಯಲ್ಲಿ 2017ರಲ್ಲಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ 2017ರ ಎ.6ರಂದು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚನೆ ವೇಳೆ ಗುಂಡ್ಲುಪೇಟೆಯ ಅಣ್ಣೂರುಕೇರಿ ಗ್ರಾಮದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮತದಾರರಿಗೆ ಹಣದ ಆಮಿಷ ಒಡ್ಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ವೈ.ಎನ್. ಅಭಿಷೇಕ್ ಕುಮಾರ್ ಅವರು ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಅದನ್ನು ಆಧರಿಸಿ ಪೊಲೀಸ್ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆ ನಡೆಸಿದ್ದ ಗುಂಡ್ಲುಪೇಟೆ ಪೊಲೀಸರು ಜು.8ರಂದು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಅದರಂತೆ ಜೆಎಂಎಫ್‌ಸಿ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸುತ್ತಿತ್ತು. ಈ ಮಧ್ಯೆ ತಮ್ಮ ವಿರುದ್ಧ ದಾಖಲಾಗಿರುವ ದೂರು ಕಾನೂನು ಬಾಹಿರವಾಗಿದ್ದು, ಅದರ ಆಧಾರದಲ್ಲಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಉಪ ಚುನಾವಣೆ ನಡೆದಾಗ ಹಾಗೂ ದೂರು ದಾಖಲಾದಾಗ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News