ಬಿಜೆಪಿಯಿಂದ ಮೈತ್ರಿ ಸರ್ಕಾರ ಅಸ್ಥಿರ ಯತ್ನ ಆರೋಪ: ಮಂಡ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ

Update: 2019-01-17 18:40 GMT

ಮಂಡ್ಯ,ಜ.17: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ನಾಯಕರು ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಕೆಡವಲು ಯತ್ನಿಸುವ ಮೂಲಕ ಅಸಂವಿಧಾನಿಕವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಗುರುವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಮಾತನಾಡಿ, ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಾಗೂ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯದ ಬಿಜೆಪಿ ನಾಯಕರು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದಾರೆ ಎಂದು ಟೀಕಿಸಿದರು.

ಅಮಿತ್ ಶಾ ಹಾಗೂ ಯಡಿಯೂರಪ್ಪ ಅವರು ಭ್ರಷ್ಟ, ಅನೈತಿಕ ಮಾರ್ಗದಲ್ಲಿ ಶಾಸಕರನ್ನು ಕುದುರೆ ವ್ಯಾಪಾರ ಮಾಡುತ್ತಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಿಡಿಕಾರಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ನಾಯಕರು ಮುಂದಾಗಿರುವುದು ಸಂವಿಧಾನ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಹಾಲಹಳ್ಳಿ ರಾಮಲಿಂಗಯ್ಯ, ಸಿ.ಎಂ.ದ್ಯಾವಪ್ಪ, ಎಂ.ಎಸ್.ಚಿದಂಬರ್, ರುದ್ರಪ್ಪ, ರಾಮಲಿಂಗಯ್ಯ, ಎಂ.ಗುರುಪ್ರಸಾದ್, ಪವಿತ್ರ ಬೊರೇಗೌಡ, ಶಕುಂತಲಾ, ಪೂರ್ಣಿಮಾ, ಗೀತಾ, ಎಚ್.ಎನ್.ರವಿ, ಸುಂಡಹಳ್ಳಿ ಮಂಜುನಾಥ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News