ಬಿಜೆಪಿ ನಾಯಕರಿಂದ ಶಾಸಕರನ್ನು ಸೆಳೆಯಲು ಯತ್ನ ಆರೋಪ: ಮಡಿಕೇರಿಯಲ್ಲಿ ಕಾಂಗ್ರೆಸ್ ಧರಣಿ

Update: 2019-01-17 18:50 GMT

ಮಡಿಕೇರಿ, ಜ.17: ರಾಜ್ಯ ಬಿಜೆಪಿ ನಾಯಕರು ವಾಮ ಮಾರ್ಗದ ಮೂಲಕ ಕಾಂಗ್ರೆಸ್‍ನ ಶಾಸಕರನ್ನು ತನ್ನೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಾಕಾರರು, ಬಿಜೆಪಿ ರೆಸಾರ್ಟ್‍ನಲ್ಲಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಆರೋಪಿಸಿದರು. ಜಿಲ್ಲೆಯ ಶಾಸಕರು ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದವರ ಸಂಕಷ್ಟಗಳಿಗೆ ಸ್ಪಂದಿಸದೆ ರೆಸಾರ್ಟ್‍ನಲ್ಲಿ ತಂಗಿದ್ದಾರೆ ಎಂದು ಕಿಡಿಕಾರಿದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ ಬಿಜೆಪಿ ನಾಯಕರು ವಾಮಮಾರ್ಗದ ಮೂಲಕ ಸಂವಿಧಾನ ಬಾಹಿರವಾಗಿ ಆಮಿಷಗಳನ್ನು ಒಡ್ಡಿ ಕಾಂಗ್ರೆಸ್ ಶಾಸಕರನ್ನು ತನ್ನೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಸರಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನಕ್ಕೆ ಯಾವುದೇ ಫಲ ದೊರೆಯುವುದಿಲ್ಲ. ಜಿಲ್ಲೆಯ ಇಬ್ಬರು ಶಾಸಕರು ಪ್ರಕೃತಿ ವಿಕೋಪದ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸದೆ ಜಿಲ್ಲೆಯಿಂದ ಕಾಣೆಯಾಗಿದ್ದಾರೆ ಎಂದು ಆರೋಪಿಸಿದರು. 

ಜಿಲ್ಲೆಯ ಜನತೆ ಮುಂದಿನ ದಿನಗಳಲ್ಲಿ ಶಾಸಕರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ವೀಣಾ ಅಚ್ಚಯ್ಯ ಹೇಳಿದರು. ವಾಮಮಾರ್ಗದ ಮೂಲಕ ಅಧಿಕಾರ ಗಳಿಸುವ ಪ್ರಯತ್ನಗಳನ್ನು ಬಿಜೆಪಿ ನಿಲ್ಲಿಸದಿದ್ದಲ್ಲಿ ಪಕ್ಷದ ವತಿಯಿಂದ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವು ಮಾದಪ್ಪ ಮಾತನಾಡಿ, ಕುಟ್ಟದಿಂದ ಕೊಡ್ಲಿಪೇಟೆಯವರೆಗೆ ಎಲ್ಲಾ ರಸ್ತೆಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ದುಸ್ತರವಾಗಿ ಪರಿಣಮಿಸಿವೆ. ಪ್ರಕೃತಿ ವಿಕೋಪದಿಂದ ಜಿಲ್ಲೆಗೆ ಸಾಕಷ್ಟು ನಷ್ಟವಾಗಿದೆ. ಇಂತಹ ಸಮಸ್ಯೆಗಳಿಗೆ ಪರಿಹಾರ ಸೂಚಿಸದೇ, ಜಿಲ್ಲೆಯ ಶಾಸಕರು ರೆಸಾರ್ಟ್ ರಾಜಕಾರಣದಲ್ಲಿ ತೊಡಗಿಕೊಂಡಿದ್ದಾರೆ ಎಂದು ಟೀಕಿಸಿದರು.

ಕೆಪಿಸಿಸಿ ಮುಖಂಡ ಮಿಟ್ಟು ಚಂಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪ್ರು ರವೀಂದ್ರ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮಾನಾಥ್ ರೈ, ನಗರಾಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಮಡಿಕೇರಿ ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸದಸ್ಯರಾದ ಚುಮ್ಮಿ ದೇವಯ್ಯ, ಹೆಚ್.ಎಂ.ನಂದ ಕುಮಾರ್, ಪ್ರಮುಖರಾದ ಕೊಲ್ಯದ ಗಿರೀಶ್, ಸುರಯ್ಯ ಅಬ್ರಾರ್, ಉದಯ ಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News