ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷದಿಂದ 28 ಸ್ಥಾನ ಗೆಲ್ಲುವ ಗುರಿ: ಕೆ.ಸಿ.ವೇಣುಗೋಪಾಲ್

Update: 2019-01-18 14:28 GMT

ಬೆಂಗಳೂರು, ಜ.18: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ರಾಜ್ಯದ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ 28ನ್ನೂ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಪಣತೊಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೂಚಿಸಿದರು.

ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಕೆ.ಎಚ್.ಪಾಟೀಲ್‌ರವರ ಅಧಿಕಾರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಂದಿನ ತಿಂಗಳು ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟಗೊಳ್ಳಲಿದ್ದು, ಎಪ್ರಿಲ್-ಮೇನಲ್ಲಿ ಚುನಾವಣೆ ನಡೆಯಬಹುದು. ಹೀಗಾಗಿ ಈಗಿನಿಂದಲೆ ಕಾಂಗ್ರೆಸ್‌ನ ತತ್ವ ಸಿದ್ಧಾಂತಗಳನ್ನು ಮನೆ ಮನೆಗೆ ತಲುಪಿಸುವಂತಹ ಕೆಲಸ ಆಗಬೇಕೆಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಚ್.ಕೆ.ಪಾಟೀಲ್ ನೇತೃತ್ವದಲ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸುವ ಎಲ್ಲ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಆ ಮೂಲಕ ರಾಹುಲ್‌ ಗಾಂಧಿಯನ್ನು ದೇಶದ ಪ್ರಧಾನಿ ಮಾಡಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣವೆಂದು ಅವರು ಆಶಿಸಿದರು.

ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಕಾಂಗ್ರೆಸ್‌ನಲ್ಲಿರುವ ಸಣ್ಣ ಮಟ್ಟದ ವೈಮನಸ್ಯಗಳನ್ನು ಬದಿಗೊತ್ತಿ ಒಟ್ಟಾಗಿ ಕೆಲಸ ಮಾಡಬೇಕು. ನಾಯಕರು ಒಗ್ಗಟ್ಟನ್ನು ಪ್ರದರ್ಶಿಸಿದರೆ, ಕಾರ್ಯಕರ್ತರಿಗೆ ಕೆಲಸ ಮಾಡಲು ಸ್ಫೂರ್ತಿ ಸಿಕ್ಕಿದಂತಾಗುತ್ತದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆಂದು ಭರವಸೆ ನೀಡಿದ್ದರು. ಆದರೆ, ಉದ್ಯೋಗ ಸೃಷ್ಟಿಸುವ ಬದಲಿಗೆ ಇರುವ ಉದ್ಯೋಗದಲ್ಲಿ ಒಂದು ಕೋಟಿ 38 ಲಕ್ಷ ಉದ್ಯೋಗವನ್ನು ಕಡಿತಗೊಳಿಸಿದ್ದಾರೆ. ಇಂತಹ ಜನವಿರೋಧಿ ಸರಕಾರದಿಂದ ಯುವ ಜನತೆ ಏನು ಬಯಸಲು ಸಾಧ್ಯವೆಂದು ಅವರು ಹೇಳಿದರು.

ಕೆಪಿಸಿಸಿ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಕೆ.ಎಚ್.ಪಾಟೀಲ್, ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಅಭೂತಪೂರ್ವಕವಾಗಿ ಗೆಲುವನ್ನು ಸಾಧಿಸಬೇಕು. ಆ ನಿಟ್ಟಿನಲ್ಲಿ ಇವತ್ತಿನಿಂದಲೆ ಜನತೆಯ ಮನೆ-ಮನಗಳಿಗೆ ಕಾಂಗ್ರೆಸ್ ಪರವಾದ ಸಿದ್ಧಾಂತವನ್ನು ತಲುಪಿಸಲು ಶ್ರಮಿಸಲಿದ್ದೇನೆಂದು ತಿಳಿಸಿದರು.

ದೇಶದಲ್ಲಿ ಕಾಂಗ್ರೆಸ್ ಇತಿಹಾಸವನ್ನು ಮತ್ತೆ ಮರುಕಳಿಸುವಂತೆ ಮಾಡಬೇಕು. ರಾಹುಲ್‌ ಗಾಂಧಿಯನ್ನು ಪ್ರಧಾನಿಯಾಗಿ ಮಾಡಬೇಕು. ಇದೇ ನನ್ನ ಮುಂದಿರುವ ಗುರಿ. ಎಲ್ಲ ರಾಜ್ಯ, ರಾಷ್ಟ್ರ ನಾಯಕರು ಹಾಗೂ ಕಾರ್ಯಕರ್ತರು ಒಂದಾಗಿ ಬಿಜೆಪಿಯನ್ನು ಸೋಲಿಸಲು ಪಣತೊಡೋಣವೆಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್, ಹಿರಿಯ ನಾಯಕರಾದ ಹರಿಪ್ರಸಾದ್, ಎಂ.ವಿ.ರಾಜಶೇಖರನ್, ಸಂಸದ ಉಗ್ರಪ್ಪ, ಶಾಸಕ ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗ್ರೆಸ್‌ನ ಸಂಸದರು, ಶಾಸಕರು, ಸಂಸದೀಯ ಕಾರ್ಯದರ್ಶಿಗಳು, ನಿಗಮ ಮಂಡಲಿಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಫೇಲ್ ಹಗರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇರ ಭಾಗಿಗಳಾಗಿದ್ದಾರೆ. ಆದರೆ, ಈ ಕುರಿತು ಮಾಧ್ಯಮಗಳಲ್ಲಿ ಪ್ರಮುಖ ಸುದ್ದಿ ಆಗುತ್ತಿಲ್ಲ. ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕೇಳುವ ಪ್ರಶ್ನೆಗಳಿಗೆ ಪ್ರಧಾನಿಯಿಂದ ಸಮರ್ಥವಾದ ಉತ್ತರಗಳು ಬರುತ್ತಿಲ್ಲ. ಈ ವಿಷಯವನ್ನು ಕಾಂಗ್ರೆಸ್ ಕಾರ್ಯಕರ್ತರು ಜನತೆಯ ಮುಂದಿಟ್ಟು, ಬಿಜೆಪಿ ಬಣ್ಣ ಬಯಲು ಮಾಡಬೇಕು.

-ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ, ಕಾಂಗ್ರೆಸ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News