ಮೈಸೂರು: ಕೇಂದ್ರದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Update: 2019-01-19 18:14 GMT

ಮೈಸೂರು,ಜ.19: ರೈತ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಗಳ ವಿರುದ್ಧ ರೈತ-ಕಾರ್ಮಿಕರ ಪರವಾದ ನೀತಿಗಳ ಜಾರಿಗಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶನಿವಾರ ಪ್ರತಿಭಟನೆಯಲ್ಲಿ ಪಾಲ್ಗೊಂ ಪ್ರತಿಭಟನಾಕಾರರು ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ನಾಗರೀಕರಿಗೆ ಒಳ್ಳೆಯ ದಿನಗಳು ಬರಲಿವೆ ಎಂದು ಭರವಸೆ ನೀಡಿತ್ತು. ಆದರೆ ಕಳೆದ ನಾಲ್ಕೂವರೆ ವರ್ಷಗಲ ಆಡಳಿತದಲ್ಲಿ ಒಂದೇ ಒಂದು ಭರವಸೆಯನ್ನೂ ಈಡೇರಿಸದೇ ರೈತ ಕಾರ್ಮಿಕರಿಗೆ ವಿಶ್ವಾಸ ದ್ರೋಹ ಎಸಗಿದೆ. ಮತ್ತೊಂದೆಡೆ ನವ ಉದಾರೀಕರಣ ಆರ್ಥಿಕ ನೀತಿಗಳನ್ನು ವೇಗವಾಗಿ ತಂದು ಬಹುರಾಷ್ಟ್ರೀಯ ಕಂಪನಿಗಳು ಮತ್ತು ದೊಡ್ಡ ಭೂಮಾಲೀಕರ ಆದಾಯವನ್ನು ಹೆಚ್ಚಿಸುತ್ತಿದೆ. ಕೃಷಿರಂಗ ತೀವ್ರ ಬಿಕ್ಕಟ್ಟಿನಲ್ಲಿದೆ. ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಡಾ.ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡಲು ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ, ರೈತರ ಆತ್ಮಹತ್ಯೆಗಳು ಮುಂದುವರಿದಿದೆ. ಬಡ ಬಗರ್ ಹುಕುಂ ಸಾಗುವಳಿದಾರರು ಸಾಗುವಳಿ ಪತ್ರ ಇಲ್ಲದೇ ಅತಂತ್ರ ಸ್ಥತಿಯಲ್ಲಿದ್ದಾರೆ ಎಂದು ಆರೋಪಸಿದರು.

ಸಾಲಬಾಧಿತ ರೈತರ ಸಾಲಮನ್ನಾ ಮಾಡಬೇಕು. ಬೆಳೆ ನಷ್ಟ ಪರಿಹಾರ ನೀಡಬೇಕು. 7ನೇ ವೇತನ ಆಯೋಗ ಶಿಫಾರಸ್ಸಿನಂತೆ ಜಾರಿಯಾಗಬೇಕು, ಸಾರ್ವಜನಿಕ ರಂಗದ ಖಾಸಗೀಕರಣ ನಿಲ್ಲಬೇಕು ಎಂಬಿತ್ಯಾದಿ ಬೇಡಿಕೆಗಳನ ಈಡೇರಿಕೆಗೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಚಿಕ್ಕಣ್ಣೇಗೌಡ, ಜಗದೀಶ್ ಸೂರ್ಯ, ಜಿ.ಜಯರಾಂ , ಮನು, ರಾಜೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News