ಬೆಂಗಳೂರಿಗೆ ಶೀಘ್ರ ಬೈಕ್ ಆ್ಯಂಬುಲೆನ್ಸ್: ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮುಜಾಹಿದ್ ಪಾಷಾ

Update: 2019-01-21 16:06 GMT

ಬೆಂಗಳೂರು, ಜ.21: ಜೀವ ರಕ್ಷಣೆಗಾಗಿ ತುರ್ತು ಪರಿಸ್ಥಿತಿಯಲ್ಲಿ ವೈದ್ಯಕೀಯ ನೆರವು ಒದಗಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ‘ಬೈಕ್ ಆ್ಯಂಬುಲೆನ್ಸ್’ಗೆ ಚಾಲನೆ ನೀಡಲಾಗುವುದು ಎಂದು ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎ. ಮುಜಾಹಿದ್ ಪಾಷಾ ಹೇಳಿದರು.

ಸೋಮವಾರ ನಗರದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆರೋಗ್ಯ ಸ್ಥಾಯಿ ಸಮಿತಿ ಕೊಠಡಿಯಲ್ಲಿ ಅಧಿಕಾರ ಸ್ವೀಕರಿಸಿದ ಬಳಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜಧಾನಿ ಬೆಂಗಳೂರಿನಲ್ಲಿ ಉದ್ಭವಿಸಿರುವ ಸಂಚಾರ ದಟ್ಟಣೆ ಸಮಸ್ಯೆಯಿಂದ ಆ್ಯಂಬುಲೆನ್ಸ್‌ಗಳು ಸರಿಯಾದ ಸಮಯಕ್ಕೆ ತಲುಪದೆ, ಕೆಲವೊಮ್ಮೆ ರೋಗಿಗಳ ಸ್ಥಿತಿ ಗಂಭೀರ ಆಗುತ್ತಿದೆ. ಇದಕ್ಕಾಗಿ ಬೈಕ್ ಆ್ಯಂಬುಲೆನ್ಸ್ ಸೇವೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ 50 ಬೈಕ್ ಆ್ಯಂಬುಲೆನ್ಸ್‌ಗಳಿಗೆ ಶೀಘ್ರ ಚಾಲನೆ ನೀಡಲಾಗುವುದೆಂದು ಪ್ರಕಟಿಸಿದರು.

ನಗರದೊಳಗೆ ಕರೆ ಬಂದ ಕಡೆಗೆ ತೆರಳಿ ರೋಗಿಗೆ ಕ್ಷಣದಲ್ಲಿ ಬೇಕಾದ ಪ್ರಾಥಮಿಕ ಚಿಕಿತ್ಸೆ ನೀಡುವುದೇ ಈ ಹೊಸ ಯೋಜನೆಯ ಉದ್ದೇಶ. ಮುಖ್ಯವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಮತ್ತು 15 ನಿಮಿಷದೊಳಗೆ ಪ್ರಥಮ ಚಿಕಿತ್ಸೆ ಅಗತ್ಯವಾದ ರೋಗಿಗಳನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಸೇವೆಯನ್ನು ಪರಿಚಯಿಸಲು ಬಿಬಿಎಂಪಿ ಮುಂದಾಗಿದೆ ಎಂದರು.

ಆರೋಗ್ಯ ಸೇವೆ ಒದಗಿಸುವಲ್ಲಿ ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಗಳು ಪ್ರಮುಖ ಸ್ಥಾನ ಪಡೆದಿವೆ. ಜೊತೆಗೆ, ಹೆಚ್ಚು ಜನರಿಗೆ ಆರೋಗ್ಯ ಸೇವೆ ನೀಡುತ್ತಿವೆ ಎಂದ ಅವರು, ಆರೋಗ್ಯ ಸಂಸ್ಥೆಗಳಲ್ಲಿ ಮೂಲ ಸೌಕರ್ಯ, ಆರೋಗ್ಯ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗಿದೆ ಎಂದು ಅವರು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆರಿಗೆ ಮತ್ತು ಡಯಾಲಿಸಿಸ್ ಚಿಕಿತ್ಸಾ ಕೇಂದ್ರಗಳನ್ನು ಹೆಚ್ಚಿಸುವ ಗುರಿ ಇದ್ದು, ಈ ಸಂಬಂಧ ಮುಂದಿನ ಬಿಬಿಎಂಪಿ ಬಜೆಟ್‌ನಲ್ಲಿ ಪ್ರಸ್ತಾಪಿಸಿ ಜಾರಿಗೆ ಪ್ರಯತ್ನ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆಆರ್ ಮಾರ್ಕೆಟ್ ಜಾಮಿಯಾ ಮಸೀದಿಯ ಮೌಲಾನಾ ಮಕ್ಸೂದ್ ಇಮ್ರಾನ್, ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನ್ನಾನ್, ನೂರುದ್ದೀನ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News