ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿಗಳ ಅನರ್ಹತೆ ಕೋರಿದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Update: 2019-01-21 16:24 GMT

ಹೊಸದಿಲ್ಲಿ, ಜ.21: ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದಂತೆ ರಾಜಕೀಯ ಪಕ್ಷಗಳಿಗೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಈ ಅರ್ಜಿಯನ್ನು ನಾವು ವಿಚಾರಣೆಗೆ ಸ್ವೀಕರಿಸುವುದಿಲ್ಲ. ಆದರೆ ಈ ಕುರಿತು ಚುನಾವಣಾ ಆಯೋಗವನ್ನು ಸಂಪರ್ಕಿಸಬಹುದು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿದ್ದ ನ್ಯಾಯಪೀಠವು ಅರ್ಜಿದಾರರಿಗೆ ತಿಳಿಸಿದೆ. ಬಿಜೆಪಿ ಮುಖಂಡ, ವಕೀಲ ಅಶ್ವಿನಿ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.

ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಕೋರಿದ್ದ ಅರ್ಜಿದಾರರು, ಇತ್ತೀಚಿನ ದಿನಗಳಲ್ಲಿ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳು ರಾಜಕೀಯ ಕ್ಷೇತ್ರ ಪ್ರವೇಶಿಸುವ ಪ್ರಕ್ರಿಯೆ ಅಧಿಕಗೊಂಡಿದೆ ಎಂಬುದು ‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್’ ಎಂಬ ಸಂಸ್ಥೆ ಪ್ರಕಟಿಸಿದ ಮಾಹಿತಿಯಿಂದ ತಿಳಿದು ಬಂದಿದೆ. ಶೇ.24ರಷ್ಟು ಸಂಸದರ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. 2009ರ ಲೋಕಸಭಾ ಚುನಾವಣೆಯಲ್ಲಿ ಸಂಸ್ಥೆಯು 7,810 ಅಭ್ಯರ್ಥಿಗಳ ಹಿನ್ನೆಲೆಯನ್ನು ಪರಿಶೀಲಿಸಿದ್ದು ಇವರಲ್ಲಿ ಶೇ.15ರಷ್ಟು ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ. ಇದರಲ್ಲಿ ಶೇ.8ರಷ್ಟು ಗಂಭೀರ ಪ್ರಕರಣಗಳಾಗಿವೆ ಎಂದು ತಿಳಿಸಿದ್ದರು. ಅಲ್ಲದೆ 2014ರ ಲೋಕಸಭಾ ಚುನಾವಣೆಯಲ್ಲಿ 8,163 ಅಭ್ಯರ್ಥಿಗಳ ಪೈಕಿ ಶೇ.17ರಷ್ಟು ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದನ್ನು ನಮೂದಿಸಿದ್ದು ಇದರಲ್ಲಿ ಶೇ.11 ಗಂಭೀರ ಕ್ರಿಮಿನಲ್ ಪ್ರಕರಣವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News