ಸ್ಮಾರ್ಟ್ ಸಿಟಿ ಯೋಜನೆ: ಶಿವಮೊಗ್ಗದಲ್ಲಿ 19 ಸಾವಿರ ಎಲ್‍ಇಡಿ ಬಲ್ಬ್ ಅಳವಡಿಸಲು ನಿರ್ಧಾರ

Update: 2019-01-21 17:38 GMT

ಶಿವಮೊಗ್ಗ, ಜ. 21: ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ 19 ಸಾವಿರ ಎಲ್‍ಇಡಿ ಬಲ್ಬ್ ಅಳವಡಿಸಲು ಸ್ಮಾರ್ಟ್ ಸಿಟಿ ಲಿಮಿಟೆಡ್ ನಿರ್ಧರಿಸಿದೆ. 

ಸೋಮವಾರ ನಗರದ ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ವಿಶೇಷ ಸಭೆಯಲ್ಲಿ ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ಅಧಿಕಾರಿಗಳು ಈ ಮಾಹಿತಿ ತಿಳಿಸಿದ್ದಾರೆ. 

'ಎಲ್‍ಇಡಿ ಬಲ್ಬ್ ಅಳವಡಿಕೆಯಿಂದ ಪಾಲಿಕೆ ಆಡಳಿತಕ್ಕೆ ಆರ್ಥಿಕವಾಗಿ ಸಾಕಷ್ಟು ಅನುಕೂಲವಾಗಲಿದೆ. ವಿದ್ಯುತ್ ವೆಚ್ಚವೂ ತಗ್ಗಲಿದೆ. ನಿರ್ದಿಷ್ಟ ಅವಧಿಯವರೆಗೆ ಬಲ್ಬ್ ಗಳ ನಿರ್ವಹಣೆಯ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ಗುತ್ತಿಗೆದಾರರೇ ನಿರ್ವಹಿಸಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಎಲ್‍ಇಡಿ ಬಲ್ಬ್ ಗಳ ಅಳವಡಿಕೆಗೆ ಸಂಬಂಧಿಸಿದಂತೆ ಮಾರ್ಚ್ 15 ರೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಈಗಾಗಲೇ ಇದಕ್ಕೆ ಸಂಬಂಧಿಸಿದ ಸಮಗ್ರ ವರದಿ ಸಿದ್ದಪಡಿಸಲಾಗಿದೆ ಎಂದು ಸಭೆಗೆ ಅಧಿಕಾರಿಗಳು ತಿಳಿಸಿದ್ದಾರೆ. 

ಅಸಮಾಧಾನ: ಸ್ಮಾಟ್ ಸಿಟಿಯಡಿ ಬಸ್‍ ನಿಲ್ದಾಣದಿಂದ ಆಲ್ಕೋಳದವರೆಗೆ ನಡೆಯುತ್ತಿರುವ ರಸ್ತೆ ಅಭಿವೃದ್ದಿ ಕಾಮಗಾರಿಯು ವಿಳಂಬಗತಿಯಲ್ಲಿ ಸಾಗುತ್ತಿರುವುದಕ್ಕೆ ಕೆಲ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಹಾಗೆಯೇ ನೆಹರೂ ಕ್ರೀಡಾಂಗಣ ಸೌಂದರ್ಯೀಕರಣ, ಮಲ್ಲೇಶ್ವರ ಪಾರ್ಕ್ ಅಭಿವೃದ್ದಿ ಕೆಲಸವೂ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಕಾಮಗಾರಿಗಳ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರರ ಬಗ್ಗೆ ಮಾಹಿತಿಯೇ ಇಲ್ಲವಾಗಿದೆ ಎಂದು ದೂರಿದರು. 

ಸ್ಮಾರ್ಟ್ ಸಿಟಿಯಡಿ ಪ್ರಸ್ತುತ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳನ್ನು ಚುರುಕುಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಗುತ್ತಿಗೆದಾರರ ವಿವರ ಒಳಗೊಂಡ ನಾಮಫಲಕ ಅಳವಡಿಕೆ ಮಾಡಲಾಗುವುದು. ಸ್ಮಾರ್ಟ್ ಸಿಟಿಯಡಿ ಯೋಜಿಸಿರುವ ಕಾಮಗಾರಿಗಳನ್ನು ಹಂತಹಂತವಾಗಿ ಅನುಷ್ಠಾನಗೊಳಿಸಲಾಗುವುದು. ತುಂಗಾ ಮೇಲ್ದಂಡೆ ಯೋಜನೆಯ ಚಾನಲ್ ಇಕ್ಕೆಲಗಳಲ್ಲಿ ಸೋಲಾರ್ ಪ್ಯಾನಲ್ ಅಳವಡಿಸಲು ನಿರ್ಧರಿಸಲಾಗಿದೆ. ಇದಕ್ಕೆ ನೀರಾವರಿ ಇಲಾಖೆಯ ಅನುಮತಿ ಪಡೆಯಬೇಕಾಗಿದೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕರೂ ಆದ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ತಿಳಿಸಿದರು. 

ಶಾಸಕ ಕೆ.ಎಸ್.ಈಶ್ವರಪ್ಪ ಮಾತನಾಡಿ, ನಗರದ ಸರ್ಕಾರಿ ಶಾಲೆಗಳ ದುರಸ್ತಿ ಹಾಗೂ ಜಿ ಪ್ಲಸ್ 2 ಮಾದರಿ ಮನೆಗಳ ನಿರ್ಮಾಣ ಕಾಮಗಾರಿಗೆ ಆದ್ಯತೆ ನೀಡಬೇಕು. ನಗರ ಯುಜಿಡಿ ಕಾಮಗಾರಿ ತ್ವರಿತಗೊಳಿಸಬೇಕು. 24 ಗಂಟೆ ಕುಡಿಯುವ ನೀರಿನ ಯೋಜನೆಯಡಿ ನಗರದ ಅನೇಕ ವಾರ್ಡ್‍ಗಳಲ್ಲಿ ಉಂಟಾಗಿರುವ ರಸ್ತೆ ಅವ್ಯವಸ್ಥೆ ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಕ್ರಮ: ರಾಗಿಗುಡ್ಡದ ನೈಸರ್ಗಿಕ ತಾಣವನ್ನು ಪ್ರವಾಸಿ ತಾಣವಾಗಿ ಅಭಿವೃದ್ದಿಪಡಿಸಲಾಗುವುದು. ಇದಕ್ಕಾಗಿ 3 ಕೋಟಿ ರೂ. ವೆಚ್ಚದ ರೂಪುರೇಷೆ ಸಿದ್ದಪಡಿಸಲಾಗಿದೆ. ಈ ಸ್ಥಳದಲ್ಲಿ ನಡೆದಿರುವ ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತೆ ಚಾರುಲತಾ ಸೋಮಲ್‍ರವರು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮೇಯರ್ ಲತಾ ಗಣೇಶ್, ಉಪ ಮೇಯರ್ ಚೆನ್ನಬಸಪ್ಪ ಉಪಸ್ಥಿತರಿದ್ದರು. 

ಕಾಂಗ್ರೆಸ್ ಸದಸ್ಯರ ಸಭಾತ್ಯಾಗ
ಸ್ಮಾರ್ಟ್ ಸಿಟಿ ಯೋಜನೆಯ ಸಲಹಾ ಸಮಿತಿಗೆ ಆಡಳಿತಾರೂಢ ಬಿಜೆಪಿಯ ಕಾರ್ಪೋರೇಟರ್ ಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ, ವಿರೋಧ ಪಕ್ಷದ ಸದಸ್ಯರನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತಂತೆ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ಅಂತಿಮವಾಗಿ ವಿರೋಧ ಪಕ್ಷದ ಸದಸ್ಯರು ಸಭೆಯಿಂದ ಹೊರನಡೆದರು. ವಿಪಕ್ಷ ಸದಸ್ಯರ ಅನುಪಸ್ಥಿತಿಯಲ್ಲಿಯೇ ಮೇಯರ್ ಸಭೆ ಮುಂದುವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News