ವಿದ್ಯುತ್ ಪೂರೈಕೆ ವ್ಯತ್ಯಯವಾಗದಂತೆ ಎಚ್ಚರ ವಹಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ

Update: 2019-01-25 16:29 GMT

ಬೆಂಗಳೂರು, ಜ. 25: ಪರೀಕ್ಷಾ ಸಮಯ ಸಮೀಪಿಸುತ್ತಿರುವುದರಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಅಡಚಣೆಯಾಗದಂತೆ ಎಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ, ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶುಕ್ರವಾರ ಬೆಂಗಳೂರು ನಗರ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಪರಿಸ್ಥಿತಿ ಕುರಿತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು.

ಬೆಂಗಳೂರು ನಗರದ ಕೆಲವೆಡೆ ತಾಂತ್ರಿಕ ಸಮಸ್ಯೆಯಿಂದ ಕೆಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಲ್ಪಪ್ರಮಾಣದ ವ್ಯತ್ಯಯ ಉಂಟಾಗಿದ್ದು ಇದನ್ನು ಸರಿಪಡಿಸುವ ಕಾಮಗಾರಿಗಳು ಪ್ರಗತಿಯಲ್ಲಿದೆ. ಫೆಬ್ರವರಿ ಅಂತ್ಯದೊಳಗೆ ಈ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ರಾಜ್ಯದಲ್ಲಿ ಪ್ರಸ್ತುತ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ಕೊರತೆ ಇಲ್ಲ. ಪ್ರಸ್ತುತ ರಾಜ್ಯವು 27,926 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಬೇಡಿಕೆಯನ್ನು ಪೂರೈಸಲು ರಾಜ್ಯ ಶಕ್ತವಾಗಿದೆ. ಜಲವಿದ್ಯುತ್ ಉತ್ಪಾದಿಸುವ ಜಲಾಶಯಗಳಲ್ಲೂ ನೀರಿನ ಸಂಗ್ರಹ ಇರುವುದರಿಂದ ಬೇಸಿಗೆಯಲ್ಲೂ ವಿದ್ಯುತ್ ವ್ಯತ್ಯಯವಾಗದಂತೆ ಎಚ್ಚರ ವಹಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಇದೇ ವೇಳೆ ಸಿಎಂ ವಿಡಿಯೋ ಕಾನ್ಫರೆನ್ ಮೂಲಕ ಎಸ್ಕಾಂಗಳ ಮುಖ್ಯಸ್ಥರೊಂದಿಗೆ ಚರ್ಚಿಸಿದರು. ಇಂಧನ ಇಲಾಖೆ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಸೆಲ್ವಕುಮಾರ್, ಕೆಪಿಸಿ ವ್ಯವಸ್ಥಾಪಕ ನಿರ್ದೇಶಕ ಪೊನ್ನುರಾಜ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಾ.ಸಿ.ಶಿಖಾ ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News