ವೀರಾಪುರ-ಬಾಣಂದೂರು ಗ್ರಾಮಗಳ ಸಮಗ್ರ ಅಭಿವೃದ್ಧಿ: ಡಿ.ಕೆ.ಶಿವಕುಮಾರ್

Update: 2019-01-26 14:50 GMT

ಬೆಂಗಳೂರು, ಜ.26: ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯ ಹುಟ್ಟೂರು ವೀರಾಪುರ ಹಾಗೂ ಆದಿಚುಂಚನಗಿರಿ ಮಠದ ಡಾ.ಬಾಲಗಂಗಾಧರನಾಥ ಸ್ವಾಮೀಜಿಯ ಹುಟ್ಟೂರು ಬಾಣಂದೂರು ಗ್ರಾಮಗಳ ಸಮಗ್ರ ಅಭಿವೃದ್ಧಿ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶನಿವಾರ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮತಕ್ಷೇತ್ರದ ವ್ಯಾಪ್ತಿಗೊಳಪಡುವ ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು ವೀರಾಪುರವನ್ನು ದತ್ತು ಪಡೆಯುತ್ತೇವೆ. ಈ ಹಿಂದೆ ಆ ಗ್ರಾಮದಲ್ಲಿ ಸಣ್ಣ ಪುಟ್ಟ ಅಭಿವೃದ್ಧಿಯಾಗಿತ್ತು. ಇದೀಗ ಮತ್ತೆ ಅದರ ಅಭಿವೃದ್ಧಿ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

ಬಾಣಂದೂರು ಹಾಗೂ ವೀರಾಪುರ ಈ ಎರಡು ಗ್ರಾಮಗಳು ಮಹಾಪುರುಷರು ಜನ್ಮ ತಾಳಿದ ಗ್ರಾಮಗಳಾಗಿದ್ದು, ನಮ್ಮ ರಾಜ್ಯಕ್ಕೆ ಎರಡು ಕಣ್ಣುಗಳಿದ್ದಂತೆ. ಹೀಗಾಗಿ ಈ ಎರಡೂ ಗ್ರಾಮಗಳ ಸಮಗ್ರ ಅಭಿವೃದ್ಧಿ ಮಾಡಲು ಚಿಂತನೆ ಮಾಡಲಾಗಿದೆ ಎಂದು ಶಿವಕುಮಾರ್ ಹೇಳಿದರು.

 ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವ ವಿಚಾರದ ಕುರಿತು ವಿಧಾನಸಭೆಯಲ್ಲಿ ಒಂದು ನಿರ್ಣಯ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಸಂಸದರು ಕೂಡ ಮನವಿ ಮಾಡಿದ್ದಾರೆ. ಕೇಂದ್ರ ಸರಕಾರ ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂದು ಒತ್ತಡ ಹೇರಲಾಗುವುದು ಎಂದು ಅವರು ಹೇಳಿದರು.

ಈಗಲ್‌ಟನ್ ರೆಸಾರ್ಟ್‌ನಲ್ಲಿ ಶಾಸಕರು ಹೊಡೆದಾಡಿಕೊಂಡ ವಿಚಾರದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶಾಸಕ ಆನಂದ್ ಸಿಂಗ್ ಆರೋಗ್ಯವಾಗಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಈ ಘಟನೆ ನಡೆಯಬಾರದಾಗಿತ್ತು ನಡೆದು ಹೋಗಿದೆ. ಈ ಪ್ರಕರಣ ಸಂಬಂಧ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಶಾಸಕ ಗಣೇಶ್ ಈಗ ಎಲ್ಲಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಮಾರು 9 ಸಾವಿರ ಕೋಟಿ ರೂ.ಗಳ ವಿವರವಾದ ಯೋಜನಾ ವರದಿ(ಡಿಪಿಆರ್) ಸಿದ್ಧ ಮಾಡಲಾಗಿದ್ದು, ಕೇಂದ್ರ ಸರಕಾರಕ್ಕೆ ಕಳುಹಿಸಿದ್ದೇವೆ ಎಂದು ಶಿವಕುಮಾರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News