ದೇಶದಲ್ಲೆ ದಾಖಲೆ ಪ್ರಮಾಣದಲ್ಲಿ ರೈತರ ಸಾಲ ಮನ್ನಾ: ಬಂಡೆಪ್ಪ ಕಾಶೆಂಪೂರ್
ಬೀದರ್, ಜ.26: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿಯೇ ದಾಖಲೆ ಪ್ರಮಾಣದಲ್ಲಿ ಸುಮಾರು 45 ಸಾವಿರ ಕೋಟಿ ರೂ.ಗಳವರೆಗೆ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.
ಶನಿವಾರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು.
ಸಮ್ಮಿಶ್ರ ಸರಕಾರವು ಅನ್ನದಾತರ ಸಂಕಷ್ಟಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದೆ. ಹಿಂದಿನ ಸರಕಾರವು ಅನುಷ್ಠಾನಗೊಳಿಸಿದ ಎಲ್ಲ ಜನಪರ ಯೋಜನೆಗಳನ್ನು ಮುಂದುವರೆಸಲಾಗುತ್ತಿದೆ ಎಂದು ಅವರು ಹೇಳಿದರು.
ಸಾಲ ಮನ್ನಾ ಯೋಜನೆಗೆ ಯಾವುದೇ ರೀತಿಯ ದಾಖಲೆಗಳನ್ನು ಪಡೆಯುತ್ತಿಲ್ಲ. ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಯೋಜನೆಯ ಹಣ ವರ್ಗಾವಣೆ ಆಗುವಂತೆ ವ್ಯವಸ್ಥೆ ರೂಪಿಸಲಾಗಿದೆ. ಸಾಲ ನೀಡಿದ ರಾಷ್ಟ್ರೀಕೃತ ಬ್ಯಾಂಕುಗಳು ಯಾವುದೇ ಕಾರಣಕ್ಕೂ ರೈತರಿಗೆ ನೋಟಿಸ್‌ಗಳನ್ನು ಕೊಡದಂತೆ ಸೂಚಿಸಲಾಗಿದೆ. ಬೀದರ್ ಜಿಲ್ಲೆಗೆ ಈ ಹಿಂದೆ ಮತ್ತು ಈಗ ಸೇರಿ ಅಂದಾಜು 1 ಸಾವಿರ ಕೋಟಿ ರೂ.ಗಳವರೆಗೆ ಸಾಲಮನ್ನಾ ಲಾಭ ಸಿಕ್ಕಿದೆ ಎಂದು ಅವರು ತಿಳಿಸಿದರು.
ಮುಖ್ಯಮಂತ್ರಿ ಬೀದರ್ ಜಿಲ್ಲೆಯ ಬಗ್ಗೆ ಸಾಕಷ್ಟು ಕಾಳಜಿ ಹೊಂದಿದ್ದು, ಇಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನ, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದು ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಕೊಡುವುದಾಗಿ ತಿಳಿಸಿದ್ದಾರೆ ಎಂದು ಬಂಡೆಪ್ಪ ಕಾಶೆಂಪೂರ್ ಹೇಳಿದರು.
ಸಣ್ಣ ನೀರಾವರಿ, ಬೃಹತ್ ನೀರಾವರಿ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಇಲಾಖೆಗಳಿಗೆ ಪ್ರಸ್ತಾವನೆಗಳನ್ನು ಸಿದ್ಧಪಡಿಸಲು ಸೂಚಿಸಿದ್ದು, ಸಚಿವರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಸೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ ಎಂದು ಅವರು ತಿಳಿಸಿದರು.
ಬೀದಿ ವ್ಯಾಪಾರಿಗಳಿಗೆ ನೆರವಾಗಲು 2 ರಿಂದ 10 ಸಾವಿರ ರೂ.ವರೆಗೆ ಸಾಲ ನೀಡಲು ಬಡವರ ಬಂಧು ಯೋಜನೆಗೆ ಚಾಲನೆ ನೀಡಿದ್ದೇವೆ. ದುಡಿಯುವ ಕೈಗಳಿಗೆ ಶಕ್ತಿ ತುಂಬಲು ಕಾಯಕ ಯೋಜನೆಯಡಿ ರಾಜ್ಯಾದ್ಯಂತ ದುಡಿಯುವ ವರ್ಗ, ಗುಂಪುಗಳಿಗೆ 5 ಲಕ್ಷ ರೂ.ಗಳ ವರೆಗೆ ಬಡ್ಡಿರಹಿತ ಸಾಲವನ್ನು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ 156 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬೀದರ್ ಜಿಲ್ಲೆಯ ಐದು ತಾಲೂಕುಗಳು ಈ ಪಟ್ಟಿಯಲ್ಲಿವೆ. ಬರ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದೆ. ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಗೊಳಿಸಿದ್ದು, ಅಗತ್ಯ ಅನುದಾನವನ್ನು ಸರಕಾರ ಬಿಡುಗಡೆ ಮಾಡುತ್ತಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷರಾದ ಭಾರತಬಾಯಿ ಶೇರಿಕಾರ, ಸಂಸದ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ ಮಲ್ಕಾಪೂರೆ, ವಿಜಯಸಿಂಗ್, ಅರವಿಂದಕುಮಾರ ಅರಳಿ, ನಗರಸಭೆ ಅಧ್ಯಕ್ಷೆ ಶಾಲಿನಿರಾಜು ಚಿಂತಾಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.