ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಗೊಂದಲಗಳಿಲ್ಲ: ಸಚಿವ ಬಂಡೆಪ್ಪ ಕಾಶೆಂಪೂರ್

Update: 2019-01-28 15:40 GMT

ಬೆಂಗಳೂರು, ಜ.28: ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಒಂದು ವೇಳೆ ಅಂತಹ ಸಮಸ್ಯೆಗಳೇನಾದರೂ ಇದ್ದಲ್ಲಿ ಅದನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಿಪಡಿಸುತ್ತಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ತಮ್ಮ ನಾಯಕರನ್ನು ಸಂತೋಷಪಡಿಸಲು ಹೇಗೇಗೋ, ಏನೇನೋ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಸರಕಾರದಲ್ಲಿ ಮಾತ್ರ ಯಾವುದೇ ಗೊಂದಲಗಳಿಲ್ಲ ಎಂದರು.

ಕುಮಾರಸ್ವಾಮಿಯವರೇ ಐದು ವರ್ಷಗಳ ಮುಖ್ಯಮಂತ್ರಿಯಾಗಿ ಈ ಸಮ್ಮಿಶ್ರ ಸರಕಾರವನ್ನು ಮುನ್ನಡೆಸಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಡುವೆ ಒಪ್ಪಂದವಾಗಿದೆ ಎಂದು ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಯಾವ ಸಂದರ್ಭದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೋ ಗೊತ್ತಿಲ್ಲ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.

ಇದೇ ವೇಳೆ ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಹಿಳೆಯೊಬ್ಬರಿಗೆ ಗದರಿಸಿದ ಪ್ರಕರಣದ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಯಾವ ಸಂದರ್ಭದಲ್ಲಿ ಹಾಗೆ ನಡೆದುಕೊಂಡಿದ್ದಾರೋ ಅನ್ನೋ ಬಗ್ಗೆ ನನಗೆ ಗೊತ್ತಿಲ್ಲ. ಈ ಬಗ್ಗೆ ಅವರೇ ಸ್ಪಷ್ಟಣೆ ಕೊಡಬೇಕು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News