×
Ad

ನಾಳೆ ಪ್ರಧಾನಿ ಮೋದಿಯಿಂದ ‘ಪರೀಕ್ಷಾಪೇ ಚರ್ಚಾ’

Update: 2019-01-28 21:49 IST

ಹೊಸದಿಲ್ಲಿ,ಜ.28: ಮಂಗಳವಾರ ಹೊಸದಿಲ್ಲಿಯ ತಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಆವೃತ್ತಿಯ ಪರೀಕ್ಷಾಪೇ ಚರ್ಚಾ ಕಾರ್ಯಕ್ರಮದಲ್ಲಿ ದೇಶದೆಲ್ಲೆಡೆಯಿಂದ ಆಗಮಿಸುವ 2,000 ವಿದ್ಯಾರ್ಥಿಗಳು, ಹೆತ್ತವರು ಮತ್ತು ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎಂದು ಮಾನವ ಸಂಪನ್ಮೂಲ ಸಚಿವಾಲಯ ತಿಳಿಸಿದೆ.

‘ಪರೀಕ್ಷಾಪೇ’ ಚರ್ಚಾ ಪ್ರಧಾನಿ ಮೋದಿ, ವಿದ್ಯಾರ್ಥಿಗಳು, ಹೆತ್ತವರು ಮತ್ತು ಶಿಕ್ಷಕರ ಮಧ್ಯೆ ನಡೆಯುವ ವಿಶಿಷ್ಟ ಸಮಾಲೋಚನಾ ಕಾರ್ಯಕ್ರಮವಾಗಿದ್ದು ಪರೀಕ್ಷೆ ಮತ್ತು ಅದಕ್ಕೆ ಸಂಬಂಧಿಸಿದ ಒತ್ತಡಕ್ಕೆ ಸಂಬಂಧಿಸಿ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವಾಲಯದ ಪ್ರಕಟನೆಯಲ್ಲಿ ತಿಳಿಸಲಾಗಿದೆ. ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮದಲ್ಲಿ ದೇಶಾದ್ಯಂತದ ವಿದ್ಯಾರ್ಥಿಗಳು ಮತ್ತು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಕಳೆದ ಬಾರಿ ಈ ಕಾರ್ಯಕ್ರಮದಲ್ಲಿ ಕೇವಲ ದಿಲ್ಲಿ ಮತ್ತು ರಾಜಧಾನಿ ಪ್ರದೇಶದ ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗಿತ್ತು. ಈ ಬಾರಿ ರಶ್ಯಾ, ನೈಜೀರಿಯ, ಇರಾನ್, ನೇಪಾಳ, ದೋಹಾ, ಕುವೈಟ್, ಸೌದಿ ಅರಬಿಯ ಮತ್ತು ಸಿಂಗಾಪುರದಲ್ಲಿ ಶಿಕ್ಷಣ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಜೊತೆಗೆ ಭಾರತದ 24 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾಲೇಜು ವಿದ್ಯಾರ್ಥಿಗಳೂ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕಾಗಿ ಈಗಾಗಲೇ 675 ವಿದ್ಯಾರ್ಥಿಗಳು ದಿಲ್ಲಿಗೆ ಆಗಮಿಸಿದ್ದಾರೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News