ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲು ಸಿಎಂಗೆ ಮನವಿ: ಜಿ.ಟಿ.ದೇವೇಗೌಡ

Update: 2019-01-28 16:49 GMT

ಬೆಂಗಳೂರು, ಜ.28: ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮನವಿ ಮಾಡಿದ್ದೇನೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಉಪನ್ಯಾಸಕರ ಕೊರತೆ, ಪ್ರಾಂಶುಪಾಲರ ಹುದ್ದೆಗಳ ಖಾಲಿ, ಅತಿಥಿ ಉಪನ್ಯಾಸಕರ ಸಮಸ್ಯೆಗಳು ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೇವೆ. ಈ ಸಂಬಂಧ ಹಣಕಾಸಿನ ವಿಷಯದಲ್ಲಿ ಸಿಎಂಗೆ ಮನವಿ ಮಾಡಲಾಗಿದೆ ಎಂದರು.

ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು, ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ಬೋಧಕರು ಮತ್ತು ಪ್ರಾಂಶುಪಾಲರ ಹುದ್ದೆಗಳು ಹೆಚ್ಚಿನ ಪ್ರಮಾಣದಲ್ಲಿ ಖಾಲಿ ಉಳಿದಿವೆ. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗಿದೆ. ಹಾಗಾಗಿ, ಖಾಲಿಯಿರುವ ಬೋಧಕ ಮತ್ತು ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ. ಸಿಎಂ ಹಾಗೂ ಹಣಕಾಸು ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಮುಂಬರುವ ಶೈಕ್ಷಣಿಕ ವರ್ಷದೊಳಗೆ ಖಾಲಿಯಿರುವ ಬೋಧಕರು ಮತ್ತು ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದ ಅವರು, ರಾಜ್ಯದಲ್ಲಿ ಸುಮಾರು 12 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದಾರೆ. ಆದರೆ, ಕಡಿಮೆ ಗೌರವಧನ ಹಾಗೂ ಇತರೆ ಸೌಲಭ್ಯಗಳ ಕೊರತೆಯಿಂದ ಅತಿಥಿ ಉಪನ್ಯಾಸಕರು ಕಷ್ಟದ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ, ಅತಿಥಿ ಉಪನ್ಯಾಸಕರ ಗೌರವಧನ 5 ಸಾವಿರ ರೂ. ಹೆಚ್ಚಳ ಮಾಡುವಂತೆ ಸಿಎಂಗೆ ಹೇಳಿದ್ದೇನೆ ಎಂದು ತಿಳಿಸಿದರು.

ಸರಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಖಾಲಿಯಿರುವ ಬೋಧಕರ ಹುದ್ದೆಗಳ ಭರ್ತಿಗೂ ಚರ್ಚಿಸಲಾಗಿದೆ. ಖಾಸಗಿ ಕಾಲೇಜುಗಳ ಗುಣಮಟ್ಟಕ್ಕೆ ತಕ್ಕಂತೆ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ಶಿಕ್ಷಣ ಕ್ಷೇತ್ರದಲ್ಲಿ ಭಾರಿ ಬದಲಾವಣೆಗಳಾಗುತ್ತಿದ್ದು, ವಿಜ್ಞಾನ, ತಂತ್ರಜ್ಞಾನದ ಅಭಿವೃದ್ಧಿ ಹಾಗೂ ಸಾಮಾಜಿಕ ಪಲ್ಲಟಗಳಿಗೆ ಅನುಗುಣವಾಗಿ ವಿಶ್ವವಿದ್ಯಾಲಯಗಳಲ್ಲಿ ಕೋರ್ಸ್‌ಗಳನ್ನು ಬದಲಾಯಿಸುವ ಅಗತ್ಯವಿದೆ ಸಚಿವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News