ಬರಪೀಡಿತ ತಾಲೂಕುಗಳಲ್ಲಿ ಅಗತ್ಯ ಮೂಲಸೌಕರ್ಯಕ್ಕೆ ಆದ್ಯತೆ: ಸಚಿವ ದೇಶಪಾಂಡೆ

Update: 2019-01-29 17:36 GMT

ಬೆಳಗಾವಿ, ಜ.29: ರಾಜ್ಯದಲ್ಲಿ 156 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದ್ದು, ಈ ತಾಲೂಕುಗಳಲ್ಲಿ ಅಗತ್ಯ ಮೂಲಸೌಕರ್ಯಕ್ಕೆ ಸರಕಾರ ಆದ್ಯತೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ಬರಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ, ಅಗತ್ಯ ಮೂಲಸೌಕರ್ಯ ಒದಗಿಸುವಂತೆ ಬರಪೀಡಿತ ತಾಲೂಕುಗಳ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೇಕಲುಮರಡಿ ಸೇರಿದಂತೆ, ಜಿಲ್ಲೆಯ ವಿವಿಧೆಡೆ ಬರ ಅಧ್ಯಯನ ನಡೆಸಿ ರೈತರಿಂದ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆನಷ್ಟದಿಂದ ತೊಂದರೆಗೆ ಒಳಗಾಗಿರುವ ರೈತರಿಗೆ ಅಗತ್ಯ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಸರಕಾರ ತನ್ನ ಶಕ್ತಿ ಮೀರಿ ಬರಪೀಡಿತ ತಾಲೂಕುಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ಹೀಗಿದ್ದರೂ ವಿರೋಧ ಪಕ್ಷ ಬಿಜೆಪಿ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಬಿಜೆಪಿ ನಾಯಕರಿಗೆ ರಾಜ್ಯದ ಬರಪರಿಸ್ಥಿತಿ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಕೇಂದ್ರ ಸರಕಾರದಿಂದ ಶೀಘ್ರ ಬರಪರಿಹಾರವನ್ನು ಕೊಡಿಸುವ ಮೂಲಕ ರೈತರ ಹಿತ ಕಾಪಾಡಲಿ ಎಂದು ಅವರು ಹೇಳಿದರು.

ಈ ವೇಳೆ ಸಂಸದ ಸುರೇಶ್ ಅಂಗಡಿ, ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣನವರ್, ಜಿಲ್ಲಾಧಿಕಾರಿ ಎಸ್ಪಿ ಬೊಮ್ಮನಹಳ್ಳಿ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News