ಪರಿಶಿಷ್ಟ ನೌಕರರ ಭಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ

Update: 2019-01-30 14:29 GMT

ಬೆಂಗಳೂರು, ಜ. 30: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್ಸಿ-ಎಸ್ಟಿ) ನೌಕರರಿಗೆ ಭಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಬುಧವಾರ ವಿಧಾನಸೌಧದ ಸಂಪುಟ ಸಭಾ ಮಂದಿರದಲ್ಲಿ ಸಿಎಂ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೇಲ್ಕಂಡ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ (ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ) ಮೀಸಲಾತಿ ಆಧಾರದ ಮೇಲೆ ಭಡ್ತಿ ಹೊಂದಿರುವ ಸರಕಾರಿ ನೌಕರರಿಗೆ ತತ್ಪರಿಣಾಮದ ಜೇಷ್ಠತೆಯನ್ನು ವಿಸ್ತರಿಸುವ ಅಧಿನಿಯಮ-2017ನ್ನು ಜಾರಿಗೊಳಿಸಲು ಸಂಪುಟ ಒಪ್ಪಿಗೆ ನೀಡಿದೆ. ವಿಧಾನ ಮಂಡಲ ಉಭಯ ಸದನಗಳಲ್ಲಿ ಅಂಗೀಕೃತವಾಗಿದ್ದ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ ಎಂದು ಹೇಳಿದರು.

ಸುಪ್ರೀಂ ಕೋರ್ಟಿನ ಅಂತಿಮ ತೀರ್ಪಿಗೆ ಒಳಪಟ್ಟು ಪರಿಶಿಷ್ಟ ನೌಕರರ ಮುಂಭಡ್ತಿ ಮೀಸಲು ಕಾಯ್ದೆ ಜಾರಿಗೊಳಿಸಲಾಗುತ್ತದೆ. ಫೆಬ್ರವರಿ 5, 6, 7ಕ್ಕೆ ಈ ಪ್ರಕರಣದ ವಿಚಾರಣೆಗೆ ಬರಲಿದೆ ಎಂದ ಅವರು, ಶೀಘ್ರವೇ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ನಿಯಮಾವಳಿಗಳ ಅನ್ವಯ ಭಡ್ತಿ ಮೀಸಲಾತಿ ಕಾಯ್ದೆ ಜಾರಿಗೊಳಿಸಲಾಗಿದೆ ಎಂದರು.

ಸುಪ್ರೀಂ ಕೋರ್ಟ್‌ನಲ್ಲಿ ಸರಕಾರದ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಮುಕುಲ್ ರೋಟಗಿ ಭಡ್ತಿ ಮೀಸಲು ಕಾಯ್ದೆ ಜಾರಿ ಮಾಡಲೇಬೇಕೆಂದು ಲಿಖಿತ ಅಭಿಪ್ರಾಯ ನೀಡಿದ್ದಾರೆ. ಅಲ್ಲದೆ, ಈ ವಿಚಾರವನ್ನು ಕೋರ್ಟಿನ ಗಮನಕ್ಕೂ ತಂದಿದ್ದಾರೆ ಎಂದು ಹೇಳಿದರು.

ಪರ-ವಿರೋಧ ಮುಖ್ಯವಲ್ಲ: ಪರಿಶಿಷ್ಟ ನೌಕರರ ಭಡ್ತಿ ಮೀಸಲಾತಿ ವಿಚಾರದಲ್ಲಿ ಕಾನೂನು ಅನುಷ್ಟಾನ ಮುಖ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪರ-ವಿರೋಧ ಸಹಜ. ಅನುಕೂಲ, ಅನಾನುಕೂಲದ ಪ್ರಶ್ನೆ ಉದ್ಭವಿಸುವುದಿಲ್ಲ. ತೊಂದರೆಯಾಗದಂತೆ ಕಾನೂನು ಜಾರಿಗೆ ಸರಕಾರ ಕ್ರಮ ವಹಿಸಲಿದೆ ಎಂದರು.

ಭಡ್ತಿ ಮೀಸಲಾತಿ ಕಾಯ್ದೆ ಜಾರಿಯಿಂದ ಯಾವುದೇ ನ್ಯಾಯಾಂಗ ನಿಂದನೆಯೂ ಆಗುವುದಿಲ್ಲ. ಪರ-ವಿರೋಧ ಪ್ರಜಾಪ್ರಭುತ್ವ ವ್ಯವಸ್ಥೆ ಲಕ್ಷಣ ಎಂದು ಸಮರ್ಥಿಸಿದ ಅವರು, ಕೋರ್ಟ್ ತೀರ್ಪಿನಿಂದ ಹಿಂಭಡ್ತಿಯಾಗಿರುವ ನೌಕರರಿಗೆ ಹಿಂದಿನ ವೇತನವನ್ನೇ ನೀಡುತ್ತಿದ್ದು, ಕಾಯ್ದೆ ಜಾರಿಯಿಂದ ಯಾವುದೇ ಹೊರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪರಿಶಿಷ್ಟ ನೌಕರರ ಸಂಭ್ರಮ: ಭಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಂಪುಟ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಕಚೇರಿಗೆ ತೆರಳಿ ಸಿಹಿ ಹಂಚಿ ಪರಿಶಿಷ್ಟ ನೌಕರರು ಸಂಭ್ರಮಿಸಿದರು.

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಭಡ್ತಿ ಮೀಸಲಾತಿ ಕಾಯ್ದೆ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಸರಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಶೀಘ್ರವೇ ಜೇಷ್ಟತಾ ಪಟ್ಟಿಯನ್ನು ಸಿದ್ಧಪಡಿಸಲಿದ್ದು, ಕಾಯ್ದೆ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು’

-ಕೃಷ್ಣಭೈರೇಗೌ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ

‘ಪರಿಶಿಷ್ಟ ನೌಕರರ ಭಡ್ತಿ ಮೀಸಲಾತಿ ಕಾಯ್ದೆಗೆ ಜಾರಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದ್ದ ಸ್ವಾಗತಾರ್ಹ. ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸೇರಿ ಸಂಪುಟದ ಸಹೋದ್ಯೋಗಿಗಳನ್ನು ಅಭಿನಂದಿಸುತ್ತೇವೆ. ಈ ಸಂಬಂಧ ಶೀಘ್ರವೇ ಮಾರ್ಗಸೂಚಿ ಸಿದ್ಧಪಡಿಸಿ, ಭಡ್ತಿ ಮೀಸಲಾತಿ ಕಲ್ಪಿಸಲು ಕ್ರಮ ವಹಿಸಬೇಕು’

-ಡಿ.ಶಿವಶಂಕರ್ , ಸರಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News