×
Ad

ಅಂಗೀಕರಿಸಿದ್ದ ನಿರ್ಣಯವನ್ನು ವಾಪಸ್ ಪಡೆದ ರಾಜ್ಯ ಸರಕಾರ

Update: 2019-01-30 23:48 IST

ಬೆಂಗಳೂರು, ಜ.30: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಮುಸ್ಲಿಂ ಸಮುದಾಯದವರನ್ನು ಮಾತ್ರ ಅಧ್ಯಕ್ಷರನ್ನಾಗಿ ನೇಮಕ ಮಾಡುವುದನ್ನು ಸಮರ್ಥಿಸಿಕೊಂಡು, ಅಂಗೀಕರಿಸಿದ್ದ ನಿರ್ಣಯವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್ ಪಡೆದುಕೊಳ್ಳಲಾಗುವುದು ಎಂದು ಬುಧವಾರ ರಾಜ್ಯ ಸರಕಾರ ಹೈಕೋರ್ಟ್‌ಗೆ ಹೇಳಿದೆ.

ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಕೇವಲ ಮುಸ್ಲಿಮರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತಿದೆ. ಸರತಿ ಆಧಾರದಲ್ಲಿ ಇತರೆ ಅಲ್ಪಸಂಖ್ಯಾತ ಸಮುದಾಯಗಳಿಗೂ ಅವಕಾಶ ಕಲ್ಪಿಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಶಿವಮೊಗ್ಗದ ವಕೀಲ ಬಿ.ವಿನೋದ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಈ ವೇಳೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ಮಾತ್ರ ಅಧ್ಯಕ್ಷರನ್ನು ನೇಮಕ ಮಾಡುವುದನ್ನು ಸಮರ್ಥಿಸಿಕೊಂಡು 2017ರ ಜು.14ರಂದು ಅಂಗೀಕರಿಸಿದ್ದ ನಿರ್ಣಯವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂದಕ್ಕೆ ಪಡೆಯಲಾಗಿದೆ. ಅಲ್ಲದೇ, ಈ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ಮನವಿಯನ್ನು ಹೊಸದಾಗಿ ಪರಿಗಣಿಸಲಾಗುವುದು. ಹಾಗೆಯೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಅಕ್ರಂ ಬಾಷಾ 2019ರ ಜ.28ರಂದು ಹೊರಡಿಸಿರುವ ಆದೇಶದ ಪ್ರತಿಯನ್ನು ಸರಕಾರದ ಪರ ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದರು. ಸರಕಾರದ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ಆಯೋಗಕ್ಕೆ ಸರತಿ ಆಧಾರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಎಲ್ಲ ವರ್ಗದವನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಂಬಂಧ ಅರ್ಜಿದಾರರ ಮನವಿಯನ್ನು ಹೊಸದಾಗಿ ಪರಿಗಣಿಸಿ ಎಂದು ನಿರ್ದೇಶನ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿತು. ಅರ್ಜಿದಾರರ ಪರ ವಕೀಲ ಎಂ. ಅರುಣ್ ಶ್ಯಾಂ ವಾದ ಮಂಡಿಸಿದ್ದರು.

ಪ್ರಕರಣವೇನು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಮುಸ್ಲಿಮರಲ್ಲದೇ ಉಳಿದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರನ್ನೂ ಸರತಿ ಆಧಾರದ ಮೇಲೆ ಅವಕಾಶ ನೀಡಬೇಕೆಂದು ವಕೀಲ ಬಿ.ವಿನೋದ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದರು. ಆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅವರು ಈ ಹಿಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆಗ ಅರ್ಜಿದಾರರ ಮನವಿ ಪರಿಗಣಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಿ ಎಂದು ನಿರ್ದೇಶಿಸಿ ಹೈಕೋರ್ಟ್ ಅರ್ಜಿಯನ್ನು ಇತ್ಯರ್ಥಪಡಿಸಿತ್ತು. ಅದರಂತೆ ಅರ್ಜಿದಾರರ ಮನವಿ ಆಲಿಸಿದ ಇಲಾಖೆ, ಆಯೋಗಕ್ಕೆ ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ಮಾತ್ರ ಅಧ್ಯಕ್ಷರನ್ನಾಗಿ ನೇಮಕ ಮಾಡುವುದನ್ನು ಸಮರ್ಥಿಸಿಕೊಂಡು 2017ರ ಜು.14ರಂದು ನಿರ್ಣಯ ಅಂಗೀಕರಿಸಿ ಮನವಿಯನ್ನು ತಳ್ಳಿ ಹಾಕಿತ್ತು. ಇಲಾಖೆಯ ಈ ನಿರ್ಣಯವನ್ನು ಪ್ರಶ್ನಿಸಿ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News