ಅರಣ್ಯ ಪ್ರದೇಶದಲ್ಲಿ ರಸ್ತೆ ಅಗಲೀಕರಣ: ಕೇಂದ್ರ-ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2019-02-01 17:21 GMT

ಬೆಂಗಳೂರು, ಫೆ.1: ಉತ್ತರ ಕನ್ನಡ ಜಿಲ್ಲೆಯಲ್ಲಿರುವ ದಾಂಡೇಲಿ ಸಂರಕ್ಷಿತ ಅರಣ್ಯ ಪ್ರದೇಶದ ವನ್ಯಜೀವಿಗಳ ಪ್ರಾಣಕ್ಕೆ ಅಪಾಯಗಳು ಸಂಭವಿಸದಂತೆ ತಡೆಗಟ್ಟಲು ಬೆಳಗಾವಿ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾಗಿ ಅಗಲೀಕರಣವನ್ನು ರದ್ದುಗೊಳಿಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರಕಾರ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಸುರೇಶ್ ಹೆಬ್ಳೀಕರ್ ಸೇರಿ ಮೂವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ.

ಅರ್ಜಿದಾರರ ಪರ ವಾದಿಸಿದ ವಕೀಲ ಜಿ.ಆರ್.ಮೋಹನ್ ಅವರು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ವನ್ಯಜೀವಿಗಳ ಸಂರಕ್ಷಣೆಗಾಗಿ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬೆಳಗಾವಿ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿಯನ್ನು ಅಗಲೀಕರಿಸಲು ಮುಂದಾಗಿದ್ದಾರೆ. ಇದರಿಂದ, ದಾಂಡೇಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿರುವ ವನ್ಯಜೀವಿಗಳಿಗೆ ಅಪಾಯಗಳು ಸಂಭವಿಸಲಿವೆ. ಹೀಗಾಗಿ, ಈ ರಸ್ತೆ ಅಗಲೀಕರಣದ ಯೋಜನೆಯನ್ನು ರದ್ದುಗೊಳಿಸಲು ಆದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ವಕೀಲರ ಮನವಿ ಆಲಿಸಿದ ನ್ಯಾಯಪೀಠವು ಕೇಂದ್ರ ಸರಕಾರ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News