ದೇವೇಗೌಡ ನಿವಾಸಕ್ಕೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ

Update: 2019-02-03 14:41 GMT

ಬೆಂಗಳೂರು, ಫೆ.3: ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರನ್ನು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ ಮಾಡಿ ಆರೋಗ್ಯ ವಿಚಾರದೊಂದಿಗೆ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.

ಶನಿವಾರ ಶೌಚಾಲಯದಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗೌಡರ ನಿವಾಸಕ್ಕೆ ತೆರಳಿದ್ದ ಡಿಸಿಎಂ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ರಾಜಕಾರಣದಲ್ಲಿನ ಬೆಳವಣಿಗೆ ಕುರಿತು ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ಪಕ್ಷ ಬಿಡದಿರುವ ಸಂಬಂಧ ದೇವೇಗೌಡರಿಗೆ ಪರಮೇಶ್ವರ್ ಅಭಯ ನೀಡಿದ್ದು, ಐದು ವರ್ಷಗಳು ಸರಕಾರ ಸುಭದ್ರವಾಗಿ ಇರುತ್ತದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಜತೆಗೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಬಜೆಟ್ ಮಂಡನೆ ಮಾಡಬೇಕು ಎಂದು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಎರಡೂ ಪಕ್ಷಗಳ ನಡುವೆ ಉಂಟಾಗುವ ಸಣ್ಣಪುಟ್ಟ ವ್ಯತ್ಯಾಸಗಳಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮ ಬಜೆಟ್ ತಯಾರಿ ನಡೆಸುತ್ತಿದ್ದು, ಎರಡೂ ಪಕ್ಷಗಳ ಯೋಜನೆಗಳ ಲೆಕ್ಕಾಚಾರ ಆಧರಿಸಿ ಬಜೆಟ್ ರೂಪಿಸುವ ಸಂಬಂಧ ಗೌಡರು ಮತ್ತು ಪರಮೇಶ್ವರ್ ನಡುವೆ ಚರ್ಚೆ ನಡೆದಿದೆ. ಕೇಂದ್ರ ಬಿಜೆಪಿ ಸರಕಾರ ಕಾಂಗ್ರೆಸ್ ಹಾಗೂ ಜೆಡಿಎಸ್ ಮತಗಳನ್ನು ಪಡೆದುಕೊಳ್ಳುವ ಉದ್ದೇಶದಿಂದ ಬಜೆಟ್ ರೂಪಿಸಿದೆ ಎಂದಿದ್ದಾರೆ ಎಂದು ಮೂಲಗಳು ಹೇಳಿವೆ.

ಬಿಜೆಪಿಯನ್ನು ಸಮರ್ಪಕವಾಗಿ ಎದುರಿಸುವ ನಿಟ್ಟಿನಲ್ಲಿ ಹಾಗೂ ರಾಜ್ಯದಲ್ಲಿ ಜನಪರ ಯೋಜನೆಗಳ ಘೋಷಣೆಯೊಂದಿಗೆ ಬಜೆಟ್ ಮಂಡನೆ ಕುರಿತು ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವ ನಿಟ್ಟಿನಲ್ಲಿ ಪರಸ್ಪರ ಹೊಂದಾಣಿಕೆ ಮೂಲಕ ಸೀಟು ಹಂಚಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಮೈತ್ರಿ ಸಂಬಂಧ ಮುರಿಯಲು ಯತ್ನಿಸುತ್ತಿರುವ ಶಕ್ತಿಗಳನ್ನು ಸಮರ್ಪಕವಾಗಿ ಎದುರಿಸಬೇಕಿದೆ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News