ಆಪರೇಷನ್ ಕಮಲದ ಸೂತ್ರಧಾರ ಬಿಎಸ್‌ವೈ: ಎಚ್.ಡಿ.ದೇವೇಗೌಡ ಆರೋಪ

Update: 2019-02-04 14:47 GMT

ಬೆಂಗಳೂರು, ಫೆ.4: ರಾಜ್ಯದಲ್ಲಿನ ಸಮ್ಮಿಶ್ರ ಸರಕಾರವನ್ನು ಅಸ್ತಿರಗೊಳಿಸಲು ಪದೇ ಪದೇ ಆಪರೇಷನ್ ಕಮಲ ನಡೆಸುತ್ತಿರುವ ಸೂತ್ರಧಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಪದ್ಮನಾಭನಗರದಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಹಿಂದೆ ಪ್ರಧಾನಿ ನರೇಂದ್ರ ಮೋದಿಯೂ ಇಲ್ಲ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಇಲ್ಲ ಎಂದರು.

ಮೂರು ದಿನದ ಮಟ್ಟಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತ ಯಡಿಯೂರಪ್ಪ, ಅಧಿಕಾರದ ವ್ಯಾಮೋಹಕ್ಕಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಹಿಂದೆ ಕೇಂದ್ರದ ಯಾವೊಬ್ಬ ಬಿಜೆಪಿ ನಾಯಕನು ಇಲ್ಲ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮೈತ್ರಿ ಸರಕಾರ ರಚನೆಯಾಗುವ ಮುನ್ನ ಹಾಗೂ ನಂತರ ಪ್ರತಿಪಕ್ಷ ಬಿಜೆಪಿ ಹಲವಾರು ಬಾರಿ ಈ ಸರಕಾರವನ್ನು ಅಸ್ತಿರಗೊಳಿಸಲು ಪ್ರಯತ್ನಪಟ್ಟಿರುವುದಕ್ಕೆ ಸಾಕ್ಷಿಗಳೇನು ಬೇಕಿಲ್ಲ. ಸರಕಾರದ ಅಸ್ತಿತ್ವದ ಬಗ್ಗೆ ಬಿಜೆಪಿ ನಾಯಕರು ಪದೇಪದೇ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರಕಾರ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಂಡಿದೆ. ಈ ಬಗ್ಗೆ ನಾವು ಜ್ಯೋತಿಷ್ಯ ಕೇಳಿ ಹೇಳಬೇಕೇ? ಪ್ರಾದೇಶಿಕ ಪಕ್ಷಗಳನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ರಾಜ್ಯ ಸರಕಾರ ಹಾಗೂ ಸಿಬಿಐ ನಡುವೆ ನಡೆಯುತ್ತಿರುವ ಸಂಘರ್ಷದ ಕುರಿತು ಕೇಳಿದ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News