ಕಾರು ಪಲ್ಟಿ: ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯ

Update: 2019-02-06 17:09 GMT

ಪಾಂಡವಪುರ,ಫೆ.6: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಟಿ.ಎಸ್.ಛತ್ರ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.

ಬೆಂಗಳೂರಿನ ಆಚಾರ್ಯ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಮೇಘನಾ (25), ಶಶಿಕಲಾ (35) ಹಾಗೂ ಯಶಸ್ವಿನಿ (25) ಎಂಬ ಯುವತಿಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಯುವತಿಯರಿಗೂ ಕೈ, ಕಾಲು ಹಾಗೂ ಮೂಗಿಗೆ ಪೆಟ್ಟು ಬಿದ್ದಿದೆ ಎನ್ನಲಾಗಿದೆ.

ವಿಶ್ವವಿಖ್ಯಾತ ಕೆ.ಆರ್.ಎಸ್ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಆಚಾರ್ಯ ಇಂಜಿನಿಯರಿಂಗ್ ಕಾಲೇಜಿನ ಯುವಕರು ಸೇರಿದಂತೆ ಎಂಟು ಮಂದಿ ಪ್ರಯಾಣಿಸುತ್ತಿದ್ದ ಮಹೇಂದ್ರ ಕಂಪೆನಿಗೆ ಸೇರಿದ ಕಾರು ಪಾದಚಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಐದಾರು ಸುತ್ತು ಪಲ್ಪಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯರ ನೆರವಿನೊಂದಿಗೆ ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಈ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News