‘ಆಪರೇಷನ್’ ಆಡಿಯೋ ಬಹಿರಂಗ: ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

Update: 2019-02-09 13:20 GMT

ಕಲಬುರ್ಗಿ, ಫೆ. 9: ‘ಆಪರೇಷನ್ ಕಮಲ’ಕ್ಕೆ ಸಂಬಂಧ ಬಹಿರಂಗವಾಗಿರುವ ಆಡಿಯೋ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಜನರಿಗೆ ತಿಳಿಸಬೇಕು ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವನ್ನು ಉರುಳಿಸಲು ಪ್ರಧಾನಿ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹುನ್ನಾರ ನಡೆಸಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿನ ಮೈತ್ರಿ ಸರಕಾರ ಯಾವುದೇ ಕಾರಣಕ್ಕೂ ಉರುಳಿಸಲು ಸಾಧ್ಯವಿಲ್ಲ. ಮೈತ್ರಿ ಸರಕಾರ ಕೆಡವಲು ಬಿಜೆಪಿ ಆರೇಳು ತಿಂಗಳಿಂದ ಹಲವು ರೀತಿಯ ಪ್ರಯತ್ನ ನಡೆಸಿದ್ದಾರೆ. ಈ ಬಾರಿಯೂ ಬಿಜೆಪಿ ಕುತಂತ್ರ ವಿಫಲವಾಗಿದೆ ಎಂದು ಖರ್ಗೆ ಹೇಳಿದರು.

ಜನರಿಂದ ಚುನಾಯಿತ ಸರಕಾರವನ್ನು ಅಸ್ಥಿರಗೊಳಿಸುವ ಚಾಳಿ ಬಿಜೆಪಿ ಇನ್ನೂ ಬಿಟ್ಟಿಲ್ಲ. ಗೋವಾ, ಮಣಿಪುರ, ಉತ್ತರಾಖಂಡ ರಾಜ್ಯಗಳಲ್ಲಿ ಮಾಡಿದ್ದನ್ನೇ ಕರ್ನಾಟಕ ರಾಜ್ಯದಲ್ಲಿಯೂ ಮಾಡಲು ಹೊರಟಿದೆ. ಆದರೆ, ಬಿಜೆಪಿ ಇದರಲ್ಲಿ ಯಾವುದೇ ಕಾರಣಕ್ಕೂ ಯಶಸ್ವಿಯಾಗುವುದಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ಒಗ್ಗಟ್ಟಾಗಿ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಮೈತ್ರಿ ಸರಕಾರದ ಬೆನ್ನಿಗೆ ನಿಂತಿದ್ದಾರೆ. ಹೀಗಾಗಿ ಅವರನ್ನೆಲ್ಲ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News