ಮಮತಾ ಬಳಿಕ ಇದೀಗ ನಾಯ್ಡು ಬಲಪ್ರದರ್ಶನ

Update: 2019-02-11 03:39 GMT

ಹೊಸದಿಲ್ಲಿ, ಫೆ.11: ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಧರಣಿ ದೇಶವ್ಯಾಪಿ ಚರ್ಚೆಗೆ ಕಾರಣವಾದ ನಡುವೆಯೇ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹಾಗೂ ಅವರ ಸಂಪುಟ ಸಹೋದ್ಯೋಗಿಗಳು, ಶಾಸಕರು ಹೊಸದಿಲ್ಲಿಯಲ್ಲಿ ಸೋಮವಾರ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡದ ಎನ್‌ಡಿಎ ಸರ್ಕಾರದ ಕ್ರಮವನ್ನು ವಿರೋಧಿಸಿ ಇಂದು ಬೆಳಗ್ಗೆಯಿಂದ ಸತ್ಯಾಗ್ರಹ ಆರಂಭಿಸಿದ್ದಾರೆ.

"ವಿರೋಧ ಪಕ್ಷಗಳ ಪ್ರಮುಖ ನಾಯಕರು ನಾಯ್ಡು ಅವರ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ತಮ್ಮ ಬೆಂಬಲ ಸೂಚಿಸಲಿದ್ದಾರೆ" ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಿಸಿದೆ. ಒಂದು ದಿನದ ನಿರಶನದ ಬಳಿಕ ತೆಲುಗುದೇಶಂ ಪಕ್ಷದ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮಂಗಳವಾರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಆಂಧ್ರಕ್ಕೆ ಭೇಟಿ ನೀಡಿ, ತೆಲುಗುದೇಶಂ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಹೊಸದಿಲ್ಲಿಯಲ್ಲಿ ಶಕ್ತಿಪ್ರದರ್ಶನಕ್ಕೆ ಟಿಡಿಪಿ ನಾಯಕರು ಮುಂದಾಗಿದ್ದಾರೆ. ಗುಂಟೂರಿನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಮೋದಿ, "ನಾಯ್ಡು ಎಂದೂ ಸತತವಾಗಿ ಚುನಾವಣೆ ಗೆದ್ದ ನಿದರ್ಶನ ಇಲ್ಲ. ಈ ಬಾರಿ ಅಧಿಕಾರ ಕಳೆದುಕೊಳ್ಳುವ ಭೀತಿ ಅವರನ್ನು ಕಾಡುತ್ತಿದೆ" ಎಂದು ಟೀಕಿಸಿದ್ದರು.

ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಹಾಗೂ ತೆಲಂಗಾಣ ವಿಭಜನೆಯಿಂದ ಆದ ನಷ್ಟವನ್ನು ಭರ್ತಿ ಮಾಡಿಕೊಡಬೇಕು ಎಂಬ ಆಗ್ರಹಕ್ಕೆ ಎನ್‌ಡಿಎ ಸರ್ಕಾರ ಒಪ್ಪದ ಹಿನ್ನೆಲೆಯಲ್ಲಿ ಕಳೆದ ವರ್ಷದ ಮಾರ್ಚ್‌ನಲ್ಲಿ ನಾಯ್ಡು, ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದಿದ್ದರು. ಆ ಬಳಿಕ ನಾಯ್ಡು, ಬಿಜೆಪಿಯೇತರ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News