ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೆ ಶಿಕ್ಷಕರು ಕೆಲಸ ಕಳೆದುಕೊಳ್ಳಲಿದ್ದಾರೆ: ಬಸವರಾಜ ಹೊರಟ್ಟಿ

Update: 2019-02-14 17:27 GMT

 ಬೆಂಗಳೂರು, ಫೆ.14: ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೆ, ಪ್ರಾಥಮಿಕ ಶಾಲಾ ಶಿಕ್ಷಕರು ಕೆಲಸ ಕಳೆದುಕೊಳ್ಳುವ ವಾತಾವರಣ ನಿರ್ಮಾಣ ಆಗಲಿದೆ ಎಂದು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಆತಂಕ ವ್ಯಕ್ತಪಡಿಸಿದರು.

ಗುರುವಾರ ಕೆಜಿ ರಸ್ತೆಯ ಶಿಕ್ಷಕರ ಸದನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ(ಧಾರವಾಡ) ಏರ್ಪಡಿಸಿದ್ದ, ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕ ಪ್ರತಿನಿಧಿಗಳ ರಾಜ್ಯ ಮಟ್ಟದ ಪ್ರಥಮ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಸಂಖ್ಯೆ ಕಡಿಮೆ ಆಗದಂತೆ ಕ್ರಮವಹಿಸಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಶಿಕ್ಷಕರು ಕೆಲಸ ಕಳೆದುಕೊಳ್ಳಲಿದ್ದಾರೆ. ಮಕ್ಕಳ ಪ್ರವೇಶ ಮತ್ತು ಪಠ್ಯ ಬೋಧನೆಯಲ್ಲಿ ಆಸಕ್ತಿ ವಹಿಸಬೇಕು. ಕನ್ನಡ, ತಮಿಳು, ತೆಲುಗು ಸೇರಿದಂತೆ ಯಾವುದೇ ಭಾಷೆ ಇರಲಿ, ಮೊದಲು ಮಾತೃಭಾಷೆಯಲ್ಲಿಯೇ ಮಕ್ಕಳಿಗೆ ಶಿಕ್ಷಣ ದೊರೆಯಬೇಕು. ಆಗ ಮಾತ್ರ ಮಕ್ಕಳು ಶೈಕ್ಷಣಿಕ ಪ್ರಗತಿ ಕಾಣಲು ಸಾಧ್ಯ ಎಂದು ಹೇಳಿದರು.

ಶಿಕ್ಷಕರ ಮುಂಭಡ್ತಿ ಪ್ರಮಾಣ ಶೇ.50ರಷ್ಟು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಅದೇ ರೀತಿ, ಭಡ್ತಿಗಾಗಿ ಇರುವ ಪರೀಕ್ಷೆ ರದ್ದು, ಗುಣಾತ್ಮಕ ಶಿಕ್ಷಕ್ಕಾಗಿ ಎಲ್ಲ 6 ವಿಷಯಗಳನ್ನು ಸೃಜಿಸುವುದು. 200 ಮಕ್ಕಳಿಗಿಂತ ಹೆಚ್ಚು ದಾಖಲಾತಿ ಹೊಂದಿದ ಶಾಲೆಗಳಿಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಮುಂಭಡ್ತಿ ಸಂಬಂಧವೂ ಚರ್ಚೆ ನಡೆಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ದೇಶದ 22 ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಶಿಕ್ಷಕರಿಗೆ ಹೆಚ್ಚಿನ ವೇತನ ನೀಡಲಾಗುತ್ತಿದೆ ಎಂದ ಅವರು, ಶಿಕ್ಷಕರಿಗೆ ಮುಂಭಡ್ತಿ ದೊರೆಯಬೇಕು. ಇದರಿಂದ ಹೊಸ ನೇಮಕಾತಿ ಆಗುವ ಜೊತೆಗೆ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ಹೊರಟ್ಟಿ ಹೇಳಿದರು . ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News