ರಾಜ್ಯ ಬಜೆಟ್‍ನಲಿ ಅಲ್ಪಸಂಖ್ಯಾತರಿಗೆ ಅನ್ಯಾಯ ಆರೋಪ: ಎಸ್ಡಿಪಿಐ ಪ್ರತಿಭಟನೆ

Update: 2019-02-15 15:59 GMT

ಶಿವಮೊಗ್ಗ, ಫೆ. 15: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್‍ನಲ್ಲಿ ಅಲ್ಪಸಂಖ್ಯಾತ ವರ್ಗಕ್ಕೆ ಅನ್ಯಾಯ ಮಾಡಲಾಗಿದೆ. ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಎಸ್ಡಿಪಿಐ ಕಾರ್ಯಕರ್ತರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಅರ್ಪಿಸಿದರು.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷಗಳು ಮುಸ್ಲಿಂರ ಅಭಿವೃದ್ದಿ ಬಗ್ಗೆ ಭರವಸೆ ನೀಡಿದ್ದವು. ಸಾಚಾರ್, ಮಿಶ್ರಾ ಆಯೋಗದ ವರದಿಯ ಶಿಫಾರಸ್ಸು ಜಾರಿಗೆ ತರುವ ಭರವಸೆ ನೀಡಲಾಗಿತ್ತು. ಆದರೆ ಪ್ರಸ್ತುತ ಸಮ್ಮಿಶ್ರ ಸರ್ಕಾರದ ಬಜೆಟ್‍ನಲ್ಲಿ ಮುಸ್ಲಿಂ ಸಮುದಾಯದ ಏಳ್ಗೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳು ಅಧಿಕಾರಕ್ಕೆ ಬರಬೇಕು. ಬಿಜೆಪಿಯನ್ನು ಸೋಲಿಸಬೇಕು ಎಂಬ ಕಾರಣದಿಂದ ಮುಸ್ಲಿಂ ಸಮುದಾಯದವರು ಶೇ. 95 ರಷ್ಟು ಮತಗಳನ್ನು ಕಾಂಗ್ರೆಸ್-ಜೆಡಿಎಸ್ ಪಕ್ಷಕ್ಕೆ ನೀಡಿದ್ದವು. ಆದರೆ ಸಮ್ಮಿಶ್ರ ಸರ್ಕಾರವು ಮುಸ್ಲಿಂ ಮತದಾರರ ನಿರೀಕ್ಷೆಗಳಣ್ನು ಹುಸಿ ಮಾಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಒಟ್ಟು ಒಜೆಟ್ ಮೊತ್ತ 2.34 ಲಕ್ಷ ಕೋಟಿ ರೂ.ಗಳಾಗಿದೆ. ಇದರಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಕೇವಲ 1 ಸಾವಿರ ಕೋಟಿ ರೂ.ಗಳನ್ನು ಮಾತ್ರ ಮೀಸಲಿಡಲಾಗಿದೆ. ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2300 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿತ್ತು ಎಂದು ಪ್ರತಿಭಟನಾಕಾರರು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರವು ಬಿಜೆಪಿ ಮತ್ತು ಕೋಮುವಾದಿ ಶಕ್ತಿಗಳ ಒತ್ತಡಕ್ಕೆ ಮಣಿದು ಅಲ್ಪಸಂಖ್ಯಾತರಿಗೆ ತಾರತಮ್ಯ ಮಾಡಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳಿಗೆ ಅಲ್ಪಸಂಖ್ಯಾತರು ಬೆಂಬಲಿಸಬೇಕೆಂದರೆ, ಕೂಡಲೇ 10 ಸಾವಿರ ಕೋಟಿ ರೂ.ಗಳನ್ನು ಅಲ್ಪಸಂಖ್ಯಾತರ ಅಭಿವೃದ್ದಿಗೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಮುಖರಾದ ಸಲೀಂಖಾನ್, ಶಾಹ್‍ರಾಜ್ ಮುಜಾಹಿದ್ ಸಿದ್ದೀಕಿ, ಅಲ್ಲಾ ಬಕ್ಷ್, ಮುಹಮ್ಮದ್ ಕಲೀಮುಲ್ಲಾ, ನಾಸಿರ್ ಅಹ್ಮದ್, ಅಬ್ದುಲ್ ಮುಜೀಬ್, ಇಮ್ರಾನ್, ಜೀಲಾನ್ ರಝಾಖಾನ್ ಸೇರಿದಂತೆ ಮೊದಲಾದವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News