ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಕೋರ್ಟ್ ಆದೇಶ

Update: 2019-02-16 15:44 GMT

ಪಾಟ್ನ, ಫೆ.16: ಮುಝಫ್ಪರ್‌ ಪುರ ಆಶ್ರಯಧಾಮ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಇಬ್ಬರು ಹಿರಿಯ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಸಿಬಿಐಗೆ ವಿಶೇಷ ಪೋಕ್ಸೊ ನ್ಯಾಯಾಲಯ ಸೂಚಿಸಿದೆ.

ಪ್ರಕರಣದಲ್ಲಿ ಆರೋಪಿಯಾಗಿರುವ ಅಶ್ವನಿ ಎಂಬಾತ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ತಾನೋರ್ವ ವೈದ್ಯ ಎಂದು ಹೇಳಿಕೊಂಡಿದ್ದ ಅಶ್ವನಿ, ಆಶ್ರಯಧಾಮದಲ್ಲಿದ್ದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುವ ಮುನ್ನ ಅವರಿಗೆ ಮತ್ತು ಬರಿಸುವ ಚುಚ್ಚುಮದ್ದು ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ಕೆಲವೊಂದು ವಿಷಯಗಳನ್ನು ಮರೆಮಾಚುತ್ತಿದೆ.

ಆದ್ದರಿಂದ ಈ ಪ್ರಕರಣದಲ್ಲಿ ಮುಝಫರ್‌ ನಗರದ ಮಾಜಿ ಜಿಲ್ಲಾ ನ್ಯಾಯಾಧೀಶ ಧರ್ಮೇಂದ್ರ ಸಿಂಗ್, ಮಾಜಿ ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಹಾಲಿ ಪ್ರಧಾನ ಕಾರ್ಯದರ್ಶಿ ಅತುಲ್ ಕುಮಾರ್ ಸಿಂಗ್ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಯಬೇಕಿದೆ ಎಂದು ಅಶ್ವನಿ ಅರ್ಜಿಯಲ್ಲಿ ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಈ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸುವಂತೆ ಪೋಕ್ಸೊ ನ್ಯಾಯಾಧೀಶರು ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News