ಕೊಡಗಿನ ಜನರ ಸಂಕಷ್ಟಗಳಿಗೆ ಮಾನವೀಯತೆಯಿಂದ ಸ್ಪಂದಿಸಿ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2019-02-16 16:17 GMT

ಬೆಂಗಳೂರು, ಫೆ.16: ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಭೂ ಕುಸಿತದಿಂದ ಕಂಗೆಟ್ಟಿರುವ ಜನರ ಸಮಸ್ಯೆಗಳಿಗೆ ಮಾನವೀಯತೆಯಿಂದ ಸ್ಪಂದಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕೊಡಗು ಪುನರ್ ನಿರ್ಮಾಣ, ಪುನರ್ವಸತಿ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಪೂರ್ಣ ಹಾನಿಗೊಳಗಾಗಿರುವ 500 ಹಾಗೂ ಅಪಾಯದ ಅಂಚಿನಲ್ಲಿರುವ 662 ಮನೆಗಳನ್ನು ಗುರುತಿಸಲಾಗಿದ್ದು, ಈಗಾಗಲೇ 840 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಯಾರಾದರೂ ಫಲಾನುಭವಿಗಳು ಬಿಟ್ಟುಹೋಗಿದ್ದರೆ ಈ ಬಗ್ಗೆ ಪರಿಣತರಿಂದ ಸಮೀಕ್ಷೆ ನಡೆಸಿ ಗುರುತಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್ ಮತ್ತು ವೀಣಾ ಅಚ್ಚಯ್ಯ ಅವರು ಬೆಳೆಹಾನಿಗೆ ಪರಿಹಾರ ಎರಡು ಹೆಕ್ಟೇರ್‌ವರೆಗೆ ನೀಡಲು ಎನ್‌ಡಿಆರ್‌ಎಫ್ ಮಾರ್ಗಸೂಚಿಯಲ್ಲಿ ಅವಕಾಶವಿದೆ. ಆದರೆ ಈ ಬಾರಿ ಭೂಕುಸಿತದಿಂದ ಜಮೀನು ನಾಶವಾಗಿರುವುದರಿಂದ ಹೆಚ್ಚಿನ ಪರಿಹಾರ ನೀಡುವಂತೆ ಸಲಹೆ ನೀಡಿದರು. ಈ ಕುರಿತು ಸ್ಪಂದಿಸಿದ ಮುಖ್ಯಮಂತ್ರಿಗಳು, ಜನಪ್ರತಿನಿಧಿಗಳು, ನಾಗರಿಕರೊಂದಿಗೆ ಚರ್ಚಿಸಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಅಂತೆಯೇ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಪೂರಕವಾಗಿ ಭೂ ಪರಿವರ್ತನೆಯ ಪ್ರಕ್ರಿಯೆಯನ್ನು ಸರಳಗೊಳಿಸುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ತಿಳಿಸಿದರು. ಪ್ರಾಧಿಕಾರದ ವತಿಯಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಸವಿವರವಾದ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ವಸತಿ ಸಚಿವ ಎಂ.ಟಿ.ಬಿ. ನಾಗರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News