ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಪರಿಷತ್ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ

Update: 2019-02-16 16:39 GMT

ಬೆಳಗಾವಿ, ಫೆ.16: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರತಿಯೊಬ್ಬ ಕಾರ್ಯಕರ್ತನೂ ಶ್ರಮಿಸಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಮಾಜಿ ಸಭಾಪತಿ ವೀರಣ್ಣಮತ್ತಿಕಟ್ಟಿ ಕರೆ ನೀಡಿದರು.

ಶನಿವಾರ ನಗರದ ಕೆಪಿಟಿಸಿಎಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೂತ್‌ಮಟ್ಟದ ಕಾರ್ಯಕರ್ತರ ತರಬೇತಿ ಮತ್ತು ಲೋಕಸಭಾ ಚುನಾವಣೆಯ ಸಿದ್ಧತೆ ಕುರಿತ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯನ್ನು ದೇಶದ ಮುಂದಿನ ಪ್ರಧಾನಿ ಮಾಡುವುದು ನಮ್ಮ ಮುಖ್ಯ ಗುರಿಯಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಾಢ್ಯವಾಗಿದೆ. ಈ ಕ್ಷೇತ್ರದ ಕಾರ್ಯಕರ್ತರು ಹೆಚ್ಚಿನ ಅನುಭವ ಪಡೆದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಸಂಕಲ್ಪ ಮಾಡಿ, ಈಗಿನಿಂದಲೇ ಪಕ್ಷದ ಸಂಘಟನೆಯಲ್ಲಿ ಕ್ರಿಯಾಶೀಲವಾಗಬೇಕು ಎಂದು ಅವರು ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಬೆಳಗಾವಿ ಲೋಕಸಭಾ ಕ್ಷೇತ್ರವು ಭೌಗೋಳಿಕವಾಗಿ ಅತೀ ದೊಡ್ಡ ಕ್ಷೇತ್ರವಾಗಿದೆ. ಪಕ್ಷದ ಹೈಕಮಾಂಡ್ ಆದಷ್ಟು ಶೀಘ್ರದಲ್ಲಿ ಅಭ್ಯರ್ಥಿ ಘೋಷಿಸಿದರೆ, ಅವರು ಕ್ಷೇತ್ರದಲ್ಲಿ ಸಂಚರಿಸಿ ಮತ ಯಾಚಿಸಲು ಅನುಕೂಲವಾಗುತ್ತದೆ ಎಂದರು.

ಪಕ್ಷ ಯಾರನ್ನಾದರೂ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಿ. ಇದು ನನ್ನ ಸ್ವಂತ ಚುನಾವಣೆ ಎಂದು ತಿಳಿದುಕೊಂಡು ಪಕ್ಷದ ಗೆಲುವಿಗೆ ಶ್ರಮಿಸುವೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಅತೀ ಹೆಚ್ಚು ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿಗೆ ದೊರಕಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದರು.

ಶಾಸಕಿಯಾಗಿ ನುಡಿದಂತೆ ನಡೆಯುತ್ತಿದ್ದೇನೆ. ಕ್ಷೇತ್ರದ ಹಳ್ಳಿ, ಹಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಸಂತಿ ಬಸ್ತವಾಡ ಮತ್ತು ವಾಘವಾಡೆ ಗ್ರಾಮಗಳ ಆಂತರಿಕ ರಸ್ತೆಗಳ ಸುಧಾರಣೆಗೆ 7.5 ಕೋಟಿ ರೂ., ಹಿರೇಬಾಗೇವಾಡಿಯ ಬಸವೇಶ್ವರ ವೃತ್ತದ ಸುಂದರೀಕರಣಕ್ಕೆ 5 ಲಕ್ಷ ರೂ. ಮಂಜೂರು ಮಾಡಿಸಲಾಗಿದೆ ಎಂದು ಅವರು ಹೇಳಿದರು.

ಅಲ್ಲದೆ, ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಪುತ್ಥಳಿ ಸ್ಥಾಪನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 50 ಲಕ್ಷ ರೂ.ಗಳನ್ನು ಮಂಜೂರು ಮಾಡಿಸಿದ್ದೇನೆ. ಕೊಟ್ಟ ಭರವಸೆಗಳಿಂದೆ ಹಿಂದೆ ಸರಿಯುವ ಹೆಣ್ಣು ನಾನಲ್ಲ ಎಂದು ಲಕ್ಷ್ಮಿಹೆಬ್ಬಾಳ್ಕರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ವೀರ ಯೋಧರ ಸ್ಮರಣಾರ್ಥ ಒಂದು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News