ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮಡಿಕೇರಿಯಲ್ಲಿ ಶಿಕ್ಷಕರ ಬೃಹತ್ ಪ್ರತಿಭಟನೆ

Update: 2019-02-16 18:21 GMT

ಮಡಿಕೇರಿ, ಫೆ.16: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.

ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಮೆರವಣಿಗೆ ನಡೆಸಿದ ಶಿಕ್ಷಕರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಹಲವಾರು ವರ್ಷಗಳಿಂದ ಸರ್ಕಾರಕ್ಕೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬಂದಿದ್ದರೂ ಎಲ್ಲಾ ಸರ್ಕಾರಗಳು ಅವುಗಳನ್ನು ನಿರ್ಲಕ್ಷಿಸುತ್ತಲೆ ಬಂದಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವರ್ಗಾವಣೆ ನೀತಿ ಜಾರಿಯಾಗಿದ್ದರು ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಮಾಡದೆ ಸರ್ಕಾರ ಶಿಕ್ಷಕರಿಗೆ ಅನ್ಯಾಯವೆಸಗಿದೆ ಎಂದು ಆರೋಪಿಸಿದ ಪ್ರಮುಖರು, ಈಗಾಗಲೆ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರು ಕಳೆದ ಮೂರು ವರ್ಷಗಳಿಂದ ನಿರಾಸೆಯಿಂದ ಕಾರ್ಯ ನಿರ್ವಹಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಯೋಜನೆಯನ್ನು ಜಾರಿಗೊಳಿಸಬೇಕು, ಮುಖ್ಯೋಪಾಧ್ಯಾಯರು, ಭಡ್ತಿ ಹೊಂದುವವರಿಗೆ 10, 15, 20 ವರ್ಷಗಳ ಆರ್ಥಿಕ ಸೌಲಭ್ಯವನ್ನು ಒದಗಿಸಬೇಕು. ಸೇವಾ ಜೇಷ್ಠತೆಯನ್ನು ಪರಿಗಣಿಸುವ ಮೂಲಕ ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆಗಳನ್ನು ನಿವಾರಿಸಬೇಕು, ಶಿಕ್ಷಕರ ವೇತನ ಆಯೋಗದಲ್ಲಿ 1998 ಮತ್ತು 2003ರಲ್ಲಿ ನೇಮಕಗೊಂಡ ಶಿಕ್ಷಕರಿಗೆ ತಾರತಮ್ಯವಾಗಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು. ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಪದೋನ್ನತಿ ಪ್ರಕ್ರಿಯೆಯನ್ನು ಮರಳಿ ಆರಂಭಿಸಬೇಕು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಕರನ್ನು ಶಿಕ್ಷಣೇತರ ಕಾರ್ಯಗಳಿಂದ ಮುಕ್ತಗೊಳಿಸಬೇಕು ಮತ್ತು ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲಭಾಷೆಯಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸರಕಾರದಿಂದ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ರಾಜ್ಯದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಪ್ರಾಥಮಿಕ ಶಾಲಾ ಶಿಕ್ಷಕರು ವಿಧಾನಸೌಧ ಚಲೋ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಹೆಚ್.ಎಸ್. ಚೇತನ್ ಎಚ್ಚರಿಕೆ ನೀಡಿದರು.

ಜಿಲ್ಲಾ ಉಪಾಧ್ಯಕ್ಷೆ ರೇಖಾಕುಮಾರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎ.ವಿ.ಮಂಜುನಾಥ್ ವೀರಾಜಪೇಟೆ ತಾಲೂಕು ಅಧ್ಯಕ್ಷ ಸುರೇಂದ್ರ, ಸೋಮವಾರಪೇಟೆ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೆ. ಬಸವರಾಜು, ಮಡಿಕೇರಿ ತಾಲೂಕು ಕಾರ್ಯದರ್ಶಿ ಹಾಗೂ ರಾಜ್ಯ ಕಾರ್ಯದರ್ಶಿಯೂ ಆಗಿರುವ ಪುದಿಯನೆರವನ ರೇವತಿ ರಮೇಶ್ ಸೇರಿ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News