ಚಿಕ್ಕಮಗಳೂರು ಜಿಪಂ ಕೆಡಿಪಿ ಸಭೆ: ಸರಕಾರಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧ್ಯಕ್ಷೆ ಸುಜಾತಾ ಸೂಚನೆ

Update: 2019-02-16 18:28 GMT

ಚಿಕ್ಕಮಗಳೂರು, ಫೆ.16: ಪ್ರಸ್ತುತ ಸಾಲಿನ ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳ ಅನುದಾನವನ್ನು ಸಮಾರ್ಪಕವಾಗಿ ಶೇಕಡಾ ನೂರರಷ್ಟು ಅನುಷ್ಠಾನಗೊಳಿಸುವುದರೊಂದಿಗೆ ಯಾವುದೇ ಅನುದಾನ ವಾಪಸ್ ಹೋಗದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಜಿ.ಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ತಿಳಿಸಿದರು.

ಶನಿವಾರ ನಗರದ ಜಿಲ್ಲಾ ಪಂಚಾಯತ್ ಅಬ್ದುಲ್ ನಝೀರ್ ಸಾಬ್ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಕಾರ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಾಕಷ್ಟು ಅನುದಾನವನ್ನು ನೀಡಿದೆ. ಇದರ ಸಮರ್ಪಕ ಬಳಕೆ ಆಗುವುದರೊಂದಿಗೆ ಗುಣಮಟ್ಟದ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಕೈಗೊಳ್ಳಬೇಕು ಎಂದ ಅವರು, ಜನ ಸಾಮಾನ್ಯರ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸ್ಪಂದಿಸುವುದು ಅತ್ಯಗತ್ಯ. ಕೆಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಡಾಕ್ಟರ್ ಗಳಲ್ಲಿ ಹೊಂದಾಣಿಕೆ ಇಲ್ಲದೆ ಸಾರ್ವಜನಿಕರಿಗೆ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಎಚ್ಚರ ವಹಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಸಮಿತಿ ಸಭೆಗಳನ್ನು ಜನಪ್ರತಿನಿಧಿಗಳ ಆಹ್ವಾನಿಸುವುದರೊಂದಿಗೆ ಕಾಲಕಾಲಕ್ಕೆ ನಡೆಸಬೇಕು ಎಂದರು.

ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಮತ್ತು ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು ಎಂದ ಅವರು ಇದಕ್ಕೆ ಅವಶ್ಯವಿರುವ ವಿಶೇಷ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಪತ್ರ ಬರೆಯಬೇಕು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಕೆ.ಆರ್.ಆನಂದಪ್ಪ ಮಾತನಾಡಿ, ಗೊಬ್ಬರ ಮಾರಾಟ ಮಳಿಗೆಗಳಲ್ಲಿ ಪರವಾನಿಗೆ ಹೊಂದಿರುವ ಗೊಬ್ಬರಗಳಲ್ಲದೆ, ಇತರೆ ಬೇರೆ ಬೇರೆ ಕಂಪನಿಯ ಮಾರಾಟ ಮಾಡಲಾಗುತ್ತದೆ. ಅಲ್ಲದೇ ನಿಗದಿತ ಎಂ.ಆರ್.ಪಿ. ದರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ಇಲಾಖೆಯು ಏನೇನು ಕ್ರಮ ಕೈಗೊಂಡಿದೆ ಎಂದು ಮಾಹಿತಿ ಪಡೆದು ಮಾತನಾಡಿದ ಅವರು ಆಗಾಗ ತಾಲೂಕು ಮಟ್ಟದ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡುವುದರೊಂದಿಗೆ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದರು.

ಈಗಾಗಲೇ ರೈತರ ಜಮೀನುಗಳ ಮಣ್ಣು ಪರೀಕ್ಷೆ ಮಾಡಿ ಮಣ್ಣು ಆರೋಗ್ಯ ಚೀಟಿಯನ್ನು ನೀಡಲಾಗಿದೆ. ಆದರೆ ಅವರಿಗೆ ಜಮೀನಿನಲ್ಲಿ ಯಾವ ಯಾವ ಬೆಳೆ ಬೆಳೆದರೆ ಉತ್ತಮ ಇಳುವರಿ ಬರುತ್ತದೆ ಎಂಬ ಮಾಹಿತಿ ನೀಡಬೇಕು. ಅಲ್ಲದೇ ಯಾವ ಯಾವ ಪೋಷಕಾಂಶಗಳನ್ನು ಕೊಡಬೇಕೆಂದು ಅವರಿಗೆ ತಿಳಿಸಬೇಕು. ಗಂಗಾಕಲ್ಯಾಣ ಯೋಜನೆಯಡಿ ರೈತರ ಅನುಕೂಲಕ್ಕಾಗಿ ಕೊಳವೆ ಬಾವಿಗಳನ್ನು ಕೊರೆಯಲಾಗಿದೆ. ಆದರೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸ ನಿಗದಿತ ಸಮಯದಲ್ಲಿ ಆಗುತ್ತಿಲ್ಲ. ಇದರಿಂದ ಫಲಾನುಭವಿಗಳಿಗೆ ಯೋಜನೆಯ ಲಾಭ ಸಿಗುತ್ತಿಲ್ಲ. ಶೀಘ್ರದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದರು.

ಜಿಲ್ಲೆಯ ಯಾವ ಯಾವ ಭಾಗಗಳಲ್ಲಿ ಮಂಗನ ಕಾಯಿಲೆ ರೋಗದಿಂದ ಪೀಡಿತರಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು, ಇದರ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ರೋಗದ ನಿಯಂತ್ರಣಕ್ಕೆ ಔಷಧ ದಾಸ್ತಾನುಗಳನ್ನು ಇಟ್ಟುಕೊಳ್ಳಬೇಕು ಎಂದ ಅವರು, ರೋಗ ಹರಡುವಿಕೆ ಹಾಗೂ ಲಕ್ಷಣದ ಬಗ್ಗೆ ಜನಸಾಮಾನ್ಯರಿಗೆ ಅಶಾ ಕಾರ್ಯಕರ್ತರ ಮೂಲಕ ಅರಿವು ಮೂಡಿಸಬೇಕು. ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರಿಗೆ ಸಿಗುವ ಸರಕಾರಿ ಯೋಜನೆಗಳು ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಹೆಚ್ಚಿನ ಪ್ರಚಾರ ನೀಡಬೇಕು ಎಂದರು.

ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮ ಮಾತನಾಡಿ, ಮುಂಬರುವ ಮಳೆಗಾಲದಲ್ಲಿ ಖಾಲಿ ಇರುವ ಸರ್ಕಾರದ ಜಾಗಗಳಲ್ಲಿ ಗಿಡ ಮರಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅವಶ್ಯವಿರುವ ಸಸಿ ಗಿಡಗಳನ್ನು ಬೆಳೆಸಬೇಕು ಎಂದು ಸಾಮಾಜಿಕ ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.

ಕೆ.ಆರ್.ಐ.ಡಿ.ಎಲ್‍ಗೆ ಗ್ರಾಮ ವಿಕಾಸ ಯೋಜನೆಯ ಹಾಗೂ ಇತರೆ ಕಾಮಗಾರಿಗಳನ್ನು ಕೈಗೊಳ್ಳಲು ವಹಿಸಿದ್ದರೂ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿದೆ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಹೀಗಾಗದಂತೆ ನೋಡಿಕೊಳ್ಳಬೇಕು ಎಂದರು.

ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಚ್.ಮಹೇಂದ್ರ ಮಾತನಾಡಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರಿಯಾಗಿ ಕಚೇರಿಗಳಲ್ಲಿ ಇಲ್ಲದೇ ಖಾಸಗಿ ಕೆಲಸಕ್ಕೆ ಹೋಗುತ್ತಾರೆ ಎಂಬ ದೂರುಗಳು ಕೇಳಿಬರುತ್ತಿದ್ದು, ಹೀಗಾಗದಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಂತಾ ಅನಿಲ್‍ಕುಮಾರ್, ಸಾಮಾಜಿಕ ಸ್ಥಾಯಿ ಸಮಿತಿಯ ಅಧ್ಯಕ್ಷ ಹಿರಿಗಯ್ಯ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದರು. ಇದೇ ಸಂದರ್ಭದಲ್ಲಿ ಸ್ವಚ್ಛ ಭಾರತ ಅಭಿಯಾನದ ಹೊರ ತಂದಿರುವ ಕ್ಯಾಲೆಂಡರ್ ಅನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿಡುಗಡೆ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News