ಫೆ. 20ರಂದು ರಾಜಾಂಗಣದಲ್ಲಿ ‘ವಿಜಯೀಭವ’: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಒತ್ತಡ ನಿರ್ವಹಣೆ ಕಾರ್ಯಾಗಾರ

Update: 2019-02-18 17:01 GMT

ಉಡುಪಿ, ಫೆ.18: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಪರ್ಯಾಯ ಪಲಿಮಾರು ಮಠ ಹಾಗೂ ಮಹೇಶ್ ಪದವಿ ಪೂರ್ವ ಕಾಲೇಜು ಸಹಯೋಗ ದಲ್ಲಿ ಎಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಒತ್ತಡ ನಿರ್ವಹಣೆ ಕುರಿತ ಕಾರ್ಯಾಗಾರ ‘ವಿಜಯೀಭವ’ ಫೆ. 20ರಂದು ನಡೆಯಲಿದೆ.

ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಬೆಳಗ್ಗೆ 10ಗಂಟೆಗೆ ಕಾರ್ಯಕ್ರಮವನ್ನು ಭಾವೀ ಪರ್ಯಾಯ ಅದಮಾರು ಮಠದ ಕಿರಿಯ ಯತಿ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು ಉದ್ಘಾಟಿಸಿ, ಆಶೀರ್ವಚನ ನೀಡುವರು. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶೇಷಶಯನ ಕಾರಿಂಜ ಅಧ್ಯಕ್ಷತೆ ವಹಿಸುವರು. ಅಪರಾಹ್ನ 1:30ಕ್ಕೆ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಆಶೀರ್ವಚನ ನೀಡುವರು.

ದೊಡ್ಡಣಗುಡ್ಡೆ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ. ಪಿ. ವಿ. ಭಂಡಾರಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕುದಿ ವಸಂತ ಶೆಟ್ಟಿ, ಉಡುಪಿಯ ಮಹೇಶ್ ಪ.ಪೂ. ಕಾಲೇಜಿನ ಪ್ರಾಂಶುಪಾಲ ಡಾ. ಕಾರ್ತಿಕ್ ಕೆ. ಸಂಪನ್ಮೂಲ ವ್ಯಕ್ತಿಗಳಾಗಿದ್ದಾರೆ.

ವಿಶೇಷ ಆಕರ್ಷಣೆಯಾಗಿ ಅಂತಾರಾಷ್ಟ್ರೀಯ ಖ್ಯಾತಿಯ ಜಾದೂಗಾರ(ಗಿಲಿ ಗಿಲಿ ಮ್ಯಾಜಿಕ್) ಜ್ಯೂನಿಯರ್ ಶಂಕರ್(ತೇಜಸ್ವಿ) ಅವರಿಂದ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಮ್ಯಾಜಿಕ್, ಗಿನ್ನೆಸ್ ದಾಖಲೆಯ ಬಾಲೆ ತನುಶ್ರೀ ಪಿತ್ರೋಡಿ ಅವರಿಂದ ಯೋಗ, ನೃತ್ಯ ಪ್ರದರ್ಶನವಿದೆ. ಬಳಿಕ ವಿಷಯ ತಜ್ಞರ ಜತೆ ವಿದ್ಯಾರ್ಥಿಗಳ ಸಂವಾದ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News