ದ್ವಿತೀಯ ಪಿಯುಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 15,410 ವಿದ್ಯಾರ್ಥಿಗಳು

Update: 2019-02-19 16:15 GMT

ಉಡುಪಿ, ಫೆ.19: ಮುಂದಿನ ಮಾರ್ಚ್ 1ರಿಂದ 18ರವರೆಗೆ ನಡೆಯ ಲಿರುವ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 15,410 ಮಂದಿ ಹಾಜರಾಗಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಪೂರ್ವ ಸಿದ್ದತೆಗೆ ಸಂಬಂಧಿಸಿದಂತೆ ಮಂಗಳವಾರ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಗೆ ಮಾಹಿತಿ ನೀಡಿದ ಪದವಿ ಪೂರ್ವ ಶಿಕ್ಷಣಾ ಇಲಾಖೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಜೋಶಿ, ಜಿಲ್ಲೆಯಲ್ಲಿ ಒಟ್ಟು 27 ಪರೀಕ್ಷಾ ಕೇಂದ್ರಗಳಿವೆ. ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು 8 ರೂಟ್ ತಂಡಗಳನ್ನು ರಚಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಬೇರೆ ಜಿಲ್ಲೆಗಳ 54 ಮಂದಿ ಸ್ಕ್ವಾಡ್ ಸದಸ್ಯರನ್ನು ನೇಮಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರಕ್ಕೆ ಆಯಾ ಕಾಲೇಜಿನ ಪ್ರಾಂಶುಪಾಲ ರನ್ನು ಮುಖ್ಯ ಅಧೀಕ್ಷಕರನ್ನಾಗಿ ನೇಮಿಸಲಾಗಿದೆ. ಇದಲ್ಲದೆ ಪ್ರತೀ ಪರೀಕ್ಷಾ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಲು ಜಾಗೃತ ದಳ ರಚಿಸಲಾಗಿದೆ ಎಂದರು.

ಈಗಾಗಲೇ ಪರೀಕ್ಷೆಗೆ ಸಂಬಂಧಿಸಿದ ಲೇಖನ ಸಾಮಾಗ್ರಿಗಳು ಜಿಲ್ಲೆಗೆ ತಲುಪಿವೆ. ಪ್ರಶ್ನೆಪತ್ರಿಕೆಗಳು ಶೀಘ್ರದಲ್ಲೇ ಬರಲಿದ್ದು, ಅವುಗಳನ್ನು ಅತಿ ಭದ್ರತೆಯಲ್ಲಿ ಜಿಲ್ಲಾ ಖಜಾನೆಯ ಸ್ಟ್ರಾಂಗ್‌ರೂಂನಲ್ಲಿ ಇಡಲಾಗುವುದು. ಇದಕ್ಕಾಗಿ ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಉನ್ನತ ಅಧಿಕಾರಿಗಳ ಸಮಿತಿ ಇದ್ದು, ಪ್ರಶ್ನೆ ಪತ್ರಿಕೆಗಳನ್ನು ಆಯಾ ಪರೀಕ್ಷಾ ದಿನದಂದೇ ಬೆಳಗ್ಗೆ ಬಿಗುಭದ್ರತೆಯಲ್ಲಿ ತಲುಪಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಮಾತನಾಡಿ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವಾಗಿದ್ದು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ಎಲ್ಲರೂ ದಕ್ಷತೆಯಿಂದ ಹಾಗೂ ಯಾವುದೇ ಲೋಪ ವಾಗದಂತೆ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕೊಠಡಿಯಲ್ಲಿ ಎಲ್ಲಾ ಮೂಲ ಸೌಕರ್ಯಗಳನ್ನು ಸಜ್ಜುಗೊಳಿಸಬೇಕು. ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಪರೀಕ್ಷೆಗೆ ಮುನ್ನವೇ ಪ್ರತೀ ಕೊಠಡಿಗೆ ತೆರಳಿ ಪ್ರತೀ ಡೆಸ್ಕ್, ಬೆಂಚುಗಳು ಸೇರಿ ದಂತೆ ಎಲ್ಲಾ ಮೂಲಸೌಕರ್ಯಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರದ ಸುತ್ತಮುತ್ತ ಸೆಕ್ಷನ್ 144 ಜಾರಿಗೆ ಬರಲಿದ್ದು, ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮಾತನಾಡಿ, ಪರೀಕ್ಷಾ ಕೇಂದ್ರಕ್ಕೆ ಅಪರಿಚಿತ ವ್ಯಕ್ತಿಗಳು ಪ್ರವೇಶಿಸದಂತೆ ಸಂಪೂರ್ಣ ನಿರ್ಬಂಧಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸೇರಿದಂತೆ ಯಾರಿಗೂ ಮೊಬೈಲ್ ಕೊಂಡೊಯ್ಯಲು ಅವಕಾಶವಿಲ್ಲ. ಕೇಂದ್ರದ 200 ಮೀಟರ್ ವ್ಯಾಪ್ತಿಯೊಳಗೆ ವಿದ್ಯಾರ್ಥಿಗಳ ಪಾಲಕರೂ ಪ್ರವೇಶಿಸುವಂತಿಲ್ಲ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ವಿವಿಧ ಇಲಾಖಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News