‘ಚಂಬಲ್’ ಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಅರ್ಜಿ ಸಲ್ಲಿಕೆ: ಕೇಂದ್ರ ಸರಕಾರ ಸೇರಿ ಎಲ್ಲ ಪ್ರತಿವಾದಿಗಳಿಗೂ ನೋಟಿಸ್

Update: 2019-02-19 16:59 GMT

ಬೆಂಗಳೂರು, ಫೆ.19: ನಟ ನೀನಾಸಂ ಸತೀಶ್ ಅಭಿನಯದ ‘ಚಂಬಲ್’ ಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ತಾಯಿ ಗೌರಮ್ಮ ಹಾಗೂ ತಂದೆ ಕರಿಯಪ್ಪ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸಾರ್ವಜನಿಕ ಮತ್ತು ಮಾಹಿತಿ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಸೆನ್ಸಾರ್ ಮಂಡಳಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಚಿತ್ರತಂಡಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಸಂಬಂಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿದೆ. ಅರ್ಜಿದಾರರ ಪರ ವಾದಿಸಿದ ವಕೀಲರು, ಚಿತ್ರದಲ್ಲಿ ಡಿಕೆ ರವಿ ಅವರ ಚಾರಿತ್ರಹರಣ ಮಾಡುವಂತಹ ಅಂಶಗಳನ್ನು ಸೇರಿಸಲಾಗಿದೆ. ಚಿತ್ರದ ಟ್ರೇಲರ್ ಹಾಗೂ ಶೀರ್ಷಿಕೆ ಅವಹೇಳನಕಾರಿಯಾಗಿದೆ. ಹೀಗಾಗಿ, ಚಿತ್ರದ ಸೆನ್ಸಾರ್ ಪ್ರಮಾಣ ಪತ್ರ ಹಿಂಪಡೆಯುವಂತೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಡಿಕೆ ರವಿ ಅವರು ಓರ್ವ ಪ್ರಾಮಾಣಿಕ ಅಧಿಕಾರಿಯಾಗಿದ್ದರು. ಅವರು ಸೇವಾಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇರಲಿಲ್ಲ. ಆದರೆ, ಚಿತ್ರದಲ್ಲಿ ಅವರನ್ನು ಕೆಟ್ಟ ವ್ಯಕ್ತಿಯನ್ನಾಗಿ ಬಿಂಬಿಸಲಾಗುತ್ತಿದೆ. ಹೀಗಾಗಿ, ಚಿತ್ರದ ಬಿಡುಗಡೆಗೆ ತಡೆ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ. ಈಗಾಗಲೇ ಚಿತ್ರದ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ಗೌರಮ್ಮ ಅವರು ದೂರು ಸಲ್ಲಿಸಿದ್ದಾರೆ. ವಕೀಲರ ವಾದ ಆಲಿಸಿದ ನ್ಯಾಯಪೀಠವು ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಫೆ.21ಕ್ಕೆ ಮುಂದೂಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News