ದ.ಕ. ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಡಿಸಿಗೆ ಮನವಿ

Update: 2019-02-19 17:29 GMT

ಮಂಗಳೂರು, ಫೆ.19: ನಗರದ ಜನನಿಬಿಡ ಪ್ರದೇಶವಾದ ಸ್ಟೇಟ್‌ಬ್ಯಾಂಕ್‌ನಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಬೀದಿಬದಿ ವ್ಯಾಪಾರಸ್ಥರ ತಲೆಗೆ ಕಟ್ಟಿ ವ್ಯಾಪಾರಸ್ಥರ ತೆರವುಗೊಳಿಸುವ ಮನಪಾದ ಕ್ರಮವನ್ನು ಖಂಡಿಸಿ ಮತ್ತು ಸಮಸ್ಯೆಗಳನ್ನು ಬಗೆಹರಿಸುವಂತೆ ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ಅವರಿಗೆ ಮನವಿ ಸಲ್ಲಿಸಲಾಯಿತು.

ಬೀದಿಬದಿ ವ್ಯಾಪಾರಸ್ಥರ ಟೌನ್ ವೆಂಡಿಂಗ್ ಕಮಿಟಿಯ ಸಭೆಯನ್ನೂ ಕರೆಯದೇ ಏಕಾಏಕಿ ಮನಪಾ ಹಾಗೂ ಪೊಲೀಸ್ ಇಲಾಖೆಯಿಂದ ಬೀದಿಬದಿ ವ್ಯಾಪಾರಸ್ಥರನ್ನು ಎತ್ತಂಗಡಿ ಮಾಡಿರುವುದು ಖಂಡನೀಯ ಎಂದು ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಮನವಿಯಲ್ಲಿ ತಿಳಿಸಿದೆ.

ಮಂಗಳೂರು ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆಗಳು ಬೀದಿಬದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆ ಮಂಗಳವಾರ ಬೆಳಗ್ಗೆ ಆರಂಭಿಸಿತ್ತು. ಬೀದಿಬದಿ ವ್ಯಾಪಾರಸ್ಥರಿಗೆ 2014ರ ನಿಯಮಾವಳಿಯನ್ನು ಜಾರಿಗೊಳಿಸಿಲ್ಲ. ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡದೇ ಬೀದಿಬದಿ ವ್ಯಾಪಾರಸ್ಥರನ್ನು ಸತಾಯಿಸುತ್ತ ಬರಲಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.

ನಗರದ ಜನನಿಬಿಡ ಪ್ರದೇಶಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ಅತಿ ಸೂಕ್ಷ್ಮವಾಗಿ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ವ್ಯಾಪಾರ ಮಾಡುತ್ತಾ ಬಂದಿದ್ದಾರೆ. ಆದರೆ ಪಾಲಿಕೆಯು ನಗರದ ಸ್ಟೇಟ್‌ಬ್ಯಾಂಕ್‌ನಿಂದ ಪುರಭವನದವರೆಗಿನ ಪ್ರದೇಶದಲ್ಲಿ ವಾಹನ ನಿಲುಗಡೆಗೆ ಪೇ ಪಾರ್ಕಿಂಗ್ ಅಳವಡಿಸಿರುವುದರಿಂದ ಸಂಚಾರ ಸಮಸ್ಯೆ ಉಲ್ಬಣಿಸುತ್ತಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ನಗರದ ಯಾವುದೇ ಜನನಿಬಿಡ ಪ್ರದೇಶಗಳಲ್ಲಿ ಅಂಗಡಿ, ಹೋಟೆಲ್, ಲಾಡ್ಜ್‌ಗಳಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಇಲ್ಲದೇ ಮಹಾನಗರ ಪಾಲಿಕೆಯು ಕಟ್ಟಡಕ್ಕೆ ಅನುಮತಿ ಕೊಟ್ಟಿದ್ದರಿಂದ ಈ ಸಮಸ್ಯೆ ಮತ್ತಷ್ಟು ಹೆಚ್ಚುತ್ತಿದೆ. ಪಾಲಿಕೆಯ ತಪ್ಪನ್ನು ಬೀದಿಬದಿ ವ್ಯಾಪಾರಸ್ಥರ ಮೇಲೆ ಹೇರಿ ಮಂಗಳೂರಿನ ನಾಗರಿಕರನ್ನು ದಿಕ್ಕು ತಪ್ಪಿಸಲಾಗುತ್ತಿದೆ. ಇದನ್ನು ಪರಿಶೀಲಿಸಿ ಬೀದಿಬದಿ ವ್ಯಾಪಾರಸ್ಥರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿ ಅವರನ್ನು ಒತ್ತಾಯಿಸಲಾಯಿತು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾತನಾಡಿ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರನ್ನೊಳಗೊಂಡ ಸಭೆಯನ್ನು ಕರೆದು ಈ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ಮಾಡಲಾಗುವುದು. ಕಾನೂನಿನ ಚೌಕಟ್ಟಿನಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ನ್ಯಾಯ ಒದಗಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ದ.ಕ. ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮುಹಮ್ಮದ್ ಮುಸ್ತಾಫ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಕೋಶಾಧಿಕಾರಿ ಮುಹಮ್ಮದ್ ಆಸಿಫ್, ಪದಾಧಿಕಾರಿಗಳಾದ ಶ್ರೀಧರ್, ಶೌಕತ್‌ಅಲಿ, ಆಜಾದ್ ಬಜಾಲ್, ಇಸ್ಮಾಯೀಲ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News