ಫೆ.27 ರಂದು ಮಂಡ್ಯದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ: ಎಚ್.ಡಿ.ಕುಮಾರಸ್ವಾಮಿ
ಮಂಡ್ಯ, ಫೆ.19: ಮಂಡ್ಯ ಜಿಲ್ಲೆಯ ಅಭಿವೃದ್ಧಿ ನನ್ನ ಜವಾಬ್ದಾರಿಯಾಗಿದ್ದು, ಫೆ.27 ರಂದು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಮಂಗಳವಾರ ಜಿಪಂ ಸಭಾಂಗಣದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನತೆ ದೇವೇಗೌಡರು, ನನ್ನ ಮೇಲೆ ವಿಶ್ವಾಸ ಇಟ್ಟು ಏಳಕ್ಕೆ ಏಳು ಸೀಟು ಗೆಲ್ಲಿಸಿಕೊಟ್ಟಿದ್ದಾರೆ. ನ್ಯಾಯ ಒದಗಿಸಲು ಜಿಲ್ಲೆಯ ಮೇಲೆ ಕಾಳಜಿ ಹೊಂದಿದ್ದೇನೆ. ಜಿಲ್ಲೆಯ ಜೊತೆಗೆ ನಾಡಿನ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
ಲೋಕೋಪಯೋಗಿ ಇಲಾಖೆಯಿಂದ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 602 ಕೋಟಿ ರೂ. ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ಕೊಡಲಾಗುವುದು ಎಂದ ಅವರು, 212 ಕೋಟಿ ರೂ. ವೆಚ್ಚದಲ್ಲಿ ಹತ್ತು ಸಾವಿರ ಪಂಪ್‍ಸೆಟ್‍ಗೆ ಟಿಸಿಗಳ ಅಳವಡಿಕೆ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು ಹಾಗೂ ಜಿಲ್ಲೆಯಲ್ಲಿ ಮೂರು ಸಾವಿರ ಕೋಟಿ ರೂ. ಅಭಿವೃದ್ಧಿಗೆ ಚಾಲನೆ ಕೊಡಲಾಗುವುದು ಎಂದು ಹೇಳಿದರು.
ಡಿಸ್ನಿಲ್ಯಾಂಡ್ ಯೋಜನೆಯನ್ನು ಮಾಡೇ ಮಾಡಲಾಗುವುದು. ಪ್ರತಿಭಟನೆ ನಡೆಸುವವರಿಗೆ ಕೈಮುಗಿದು ಹೇಳ್ತೀನಿ. ಜಲಾಶಯಕ್ಕೆ ಧಕ್ಕೆ ಬಾರದ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಮನರಂಜನೆಗಾಗಿ ಯೋಜನೆ ಮಾಡಲಾಗುತ್ತಿಲ್ಲ. ರೈತನ ಭೂಮಿ ವಶ ಪಡಿಸಿಕೊಳ್ಳುವುದಿಲ್ಲ. ಕನಿಷ್ಠ 40-50ಸಾವಿರ ಮಂದಿಗೆ ಜೀವನವಾಗಲಿದೆ. ಅನುಮಾನ ಇರುವವರ ಜತೆ ಬಹಿರಂಗ ಚರ್ಚೆಗೆ ಸಿದ್ಧ. ಯೋಜನೆ ಪೂರ್ಣಗೊಂಡರೆ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ. ಮಂಡ್ಯ ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಯೋಜನೆಗೆ ಚಿಂತನೆ ಮಾಡಲಾಗಿದೆ ಎಂದು ಅವರು ಹೇಳಿದರು.
ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಜಿಪಂ ಅಧ್ಯಕ್ಷೆ ನಾಗರತ್ನ ಸ್ವಾಮಿ, ಸಂಸದ ಎಲ್.ಆರ್.ಶಿವರಾಮೇಗೌಡ, ಶಾಸಕರಾದ ಎಂ.ಶ್ರೀನಿವಾಸ್, ಸುರೇಶ್‍ಗೌಡ, ರವೀಂದ್ರ ಶ್ರೀಕಂಠಯ್ಯ, ನಾರಾಯಣಗೌಡ, ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೇದ್ ಅಖ್ತರ್, ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಯಾಲಕ್ಕಿಗೌಡ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.