ಬರ ಪರಿಹಾರ: ಕೂಡಲೇ ಹಣ ಬಿಡುಗಡೆಗೆ ಕೇಂದ್ರಕ್ಕೆ ಕಂದಾಯ ಸಚಿವ ದೇಶಪಾಂಡೆ ಮನವಿ

Update: 2019-02-20 14:58 GMT

ಬೆಂಗಳೂರು, ಫೆ. 20: ರಾಜ್ಯದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ 949 ಕೋಟಿ ರೂ.ಪರಿಹಾರ ಮೊತ್ತವನ್ನು ಘೋಷಣೆ ಮಾಡಿದ್ದು, ಈವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಕೂಡಲೇ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಆಗ್ರಹಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, 176 ತಾಲೂಕುಗಳ ಪೈಕಿ 156 ತಾಲೂಕುಗಳನ್ನು ಈಗಾಗಲೇ ಬರ ಪೀಡಿತವೆಂದು ಘೋಷಿಸಲಾಗಿದೆ. ಒಟ್ಟಾರೆ 19.46ಲಕ್ಷ ಹೆಕ್ಟೆರ್ ಕೃಷಿ ಭೂಮಿ ಹಾಗೂ 23 ಸಾವಿರ ಹೆಕ್ಟೆರ್ ತೋಟಗಾರಿಕೆ ಬೆಳೆ ನಷ್ಟವಾಗಿದೆ. ಒಟ್ಟು 11,384ಕೋಟಿ ರೂ.ನಷ್ಟದ ಅಂದಾಜು ಮಾಡಲಾಗಿದೆ.

ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ 2,064.30 ಕೋಟಿ ರೂ.ಅನುದಾನ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿನ್ನು ಸಲ್ಲಿಸಿತ್ತು. ಆದರೆ, ಕೇಂದ್ರ ಸರಕಾರ ಕೇವಲ 949 ಕೋಟಿ ರೂ.ಅನುದಾನ ಘೋಷಣೆ ಮಾಡಿದೆ. ಈವರೆಗೂ ಒಂದು ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ. ಹೀಗಾಗಿ ಕೂಡಲೇ ಬರ ಪರಿಹಾರ ಕಾರ್ಯಗಳಿಗೆ ಕೇಂದ್ರ ಅನುದಾನ ಘೋಷಣೆ ಮಾಡಬೇಕೆಂದು ಕೋರಿ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದು ದೇಶಪಾಂಡೆ ಇದೆ ವೇಳೆ ತಿಳಿಸಿದರು.

‘ಹೊಸ ತಾಲೂಕುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲು ಅನುಕೂಲ ಆಗುವಂತೆ ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಅಗತ್ಯ ಸಿಬ್ಬಂದಿ ಒದಗಿಸಲು ಕ್ರಮ ಕೈಗೊಳ್ಳಬೇಕು’

-ಆರ್.ವಿ.ದೇಶಪಾಂಡೆ, ಕಂದಾಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News