ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ವ್ಯಕ್ತಿ ಸಾವು

Update: 2019-02-20 15:45 GMT

ಬೆಳಗಾವಿ, ಫೆ. 20: ಜಾತ್ರೆಯ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ಆಕಸ್ಮಿಕವಾಗಿ ವ್ಯಕ್ತಿಯೊಬ್ಬರಿಗೆ ತಗುಲಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗುಂಡು ತಗುಲಿ ಮೃತಪಟ್ಟ ವ್ಯಕ್ತಿಯನ್ನು ಢವಳೇಶ್ವರ ಗ್ರಾಮದ ನಿಜಗುಣ ಅಂಗಡಿ ಎಂದು ಗುರುತಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪಿಯನ್ನು ಮಹದೇವ ನಾಡಗೌಡ ಎಂದು ಗೊತ್ತಾಗಿದ್ದು, ತಮ್ಮ ಲೈಸನ್ಸ್ ಹೊಂದಿರುವ ರಿವಾಲ್ವಾರ್‌ನಿಂದ ಗುಂಡು ಹಾರಿಸಿದ್ದಾರೆಂದು ತಿಳಿದು ಬಂದಿದೆ.

ಗ್ರಾಮದಲ್ಲಿನ ರಂಗೇಶ್ವರ ಜಾತ್ರೆಯ ನಿಮಿತ್ತ ದೇವಸ್ಥಾನದ ಪಕ್ಕದಲ್ಲಿಯೇ ಗಾಳಿಯಲ್ಲಿ ಐದು ಸುತ್ತು ಗುಂಡು ಹಾರಿಸಲಾಗುತ್ತಿತ್ತು. ಈ ವೇಳೆ ಮಹದೇವ ನಾಡಗೌಡ ರಿವಾಲ್ವಾರ್‌ನಿಂದ ಆಕಸ್ಮಿಕವಾಗಿ ಗುಂಡು ಹಾರಿ ನಿಜಗುಣ ಅಂಗಡಿಗೆ ತಗುಲಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತ ನಿಜಗುಣ ಅವರ ಮೃತದೇಹವನ್ನು ಗೋಕಾಕ್ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದ ವಾರಸುದಾರರಿಗೆ ಒಪ್ಪಿಸಲಾಗಿದೆ.

ಮೃತ ನಿಜಗುಣ ಸಂಬಂಧಿಕರು ಕುಲಗೋಡ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮೊಕದ್ದಮೆ ದಾಖಲಿಸಿಕೊಂಡಿದ್ದು ತನಿಖೆ ಕೈಗೊಳ್ಳಲಾಗಿದೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಸುಧೀಂದ್ರ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News